ಮೈಸೂರು: ಬಂಡೀಪುರ ಭಾಗದಲ್ಲಿ ಜನರ ನಿದ್ದೆ ಕೆಡಿಸಿದ್ದ ಹಾಗೂ ಮಹಿಳೆಯನ್ನು ಬಲಿ ಪಡೆದಿದ್ದ ಹುಲಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.
ನಿನ್ನೆ ಮಧ್ಯರಾತ್ರಿ ಜಿಲ್ಲೆಯ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆ ಹಿಡಿದಿದ್ದಾರೆ. ಅರವಳಿಕೆ ಚುಚ್ಚುಮದ್ದು ನೀಡಿ ಯಶಸ್ವಿಯಾಗಿ ಹುಲಿಯನ್ನು ಹಿಡಿಯಲಾಗಿದೆ.
ಅರಣ್ಯ ಇಲಾಖೆ ಸಿಬ್ಬಂದಿ ಸೇರಿದಂತೆ 207 ಮಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದರು. 50ಕ್ಕೂ ಹೆಚ್ಚು ಕ್ಯಾಮೆರಾಗಳನ್ನು ಅಳವಡಿಸಿ, ಡ್ರೋನ್ ಕ್ಯಾಮೆರಾದ ಮೂಲಕವೂ ಹುಲಿ ಚಲನವಲನಗಳ ಪತ್ತೆ ಹಚ್ಚಿ ಸೆರೆ ಹಿಡಿಯಲಾಗಿದೆ. ಹುಲಿಯನ್ನು ಮೈಸೂರಿನ ಕೂರ್ಗಳ್ಳಿ ಸಮೀಪದ ಪ್ರಾಣಿಗಳ ಪುನರ್ವಸತಿ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಆರೋಗ್ಯ ತಪಾಸಣೆ ನಂತರ ಇಲಾಖೆ ಮುಂದಿನ ಕ್ರಮ ಕೈಗೊಳ್ಳಲಾಗಿದೆ.










