ಎಂ.ಎಂ ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣ: ವಿಶೇಷ ಕೋರ್ಟ್ ಸ್ಥಾಪನೆಗೆ ರಾಜ್ಯ ಸರ್ಕಾರ ತೀರ್ಮಾನ…

54
firstsuddi

ಬೆಳಗಾವಿ: ರಾಜ್ಯದಲ್ಲಿ ಸಂಶೋಧಕ ಎಂ.ಎಂ. ಕಲಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯಾ ಪ್ರಕರಣಗಳ ತ್ವರಿತ ವಿಚಾರಣೆಗೆ ರಾಜ್ಯದಲ್ಲಿ ವಿಶೇಷ ಕೋರ್ಟ್ ಸ್ಥಾಪನೆಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ಆದೇಶವನ್ನು ಹೊರಡಿಸಿದ್ದಾರೆ.

ಇಡೀ ರಾಜ್ಯದಲ್ಲಿ ಬಲಪಂಥೀಯ ಹೇಳಿಕೆಗಳನ್ನು ವಿರೋಧಿಸುತ್ತಾ ತಮ್ಮದೇ ಸಾಮಾಜಿಕ ಹೋರಾಟಗಳನ್ನು ಮಾಡುತ್ತಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಕನ್ನಡ ಸಾಹಿತ್ಯ ಸಂಶೋಧಕ ಎಂ.ಎಂ. ಕಲಬುರ್ಗಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇನ್ನು ಹತ್ಯೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದ್ದರೂ, ಹತ್ಯೆಗೆ ಯಾರು ಸುಪಾರಿ ಕೊಟ್ಟಿದ್ದು ಯಾವ ಉದ್ದೇಶಕ್ಕಾಗಿ ಕೊಲೆ ಮಾಡಲಾಗಿದೆ ಎಂಬುದರ ಬಗ್ಗೆ ಪೂರ್ಣ ಮಾಹಿತಿ ಲಭ್ಯವಾಗಿಲ್ಲ. ಹಲವು ವರ್ಷಗಳಿಂದ ಈ ಪ್ರಕರಣಗಳು ನಿಧಾನಗತಿಯಲ್ಲಿ ವಿಚಾರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎರಡು ಪ್ರಕರಣಗಳ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಲು ಸರ್ಕಾರ ಆದೇಶ ಹೊರಡಿಸಿದೆ.

ಖ್ಯಾತ ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆಯಾಗಿದ್ದ ಗೌರಿ ಲಂಕೇಶ್ ರವರು ಸೆಪ್ಟೆಂಬರ್ 05, 2017 ರಂದು ಹತ್ಯೆಗೀಡಾಗಿದ್ದು, ಈ ಸಂಬಂಧ ವಿಶೇಷ ತನಿಖಾ ದಳ ರಚಿಸಲಾಗಿದೆ. ಇದುವರೆಗೂ 18 ಆರೋಪಿಗಳು ಬಂಧನಕ್ಕೊಳಗಾಗಿದ್ದು, 1200 ಪುರಾವೆ ಹಾಗೂ 500 ಕ್ಕೂ ವಿವಿಧ ಬಗೆಯ ಸಾಕ್ಷ್ಯಗಳನ್ನೊಳಗೊಂಡ ಚಾರ್ಜ್‌ ಶೀಟ್‌ನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಪ್ರಕರಣದ ವಿಚಾರಣೆಯು ನ್ಯಾಯಾಲಯದಲ್ಲಿ ಜುಲೈ, 2022 ರಿಂದ ಪ್ರಾರಂಭಗೊಂಡಿದ್ದು, ನ್ಯಾಯಾಲಯದ ಅನುದಿನದ ಪ್ರಕರಣಗಳು ಸಾಕಷ್ಟು ಸಂಖ್ಯೆಯಲ್ಲಿ ಇರುವುದರಿಂದ ವಿಚಾರಣೆಯು ನಿಧಾನಗತಿಯಲ್ಲಿ ಸಾಗಿದೆ. ಆದ್ದರಿಂದ, ಈ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಿ, ಪೂರ್ಣಾವಧಿ ನ್ಯಾಯಾಧೀಶರನ್ನು ನೇಮಕ ಮಾಡುವಂತೆ ಮೃತರ ಸಹೋದರಿ ಕವಿತಾ ಲಂಕೇಶ್ ರವರು ಕೋರಿದ್ದು. ಈ ಬಗ್ಗೆ ಜರೂರು ಅಗತ್ಯ ಕ್ರಮವಹಿಸಲು ಸೂಚಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.