ರಾಜ್ಯದಲ್ಲಿ ಕೊರೊನಾಗೆ ಮೊದಲ ಬಲಿ- ದಿನೇಶ್ ಗುಂಡೂರಾವ್ ಸ್ಪಷ್ಟನೆ…

45
firstsuddi

ಬೆಂಗಳೂರು: ಕೊರೊನಾ ಪ್ರಕರಣಗಳು ಹೆಚ್ಚುವ ಭೀತಿ ನಡುವೆಯೇ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ನಗರದ ಚಾಮರಾಜಪೇಟೆಯ 64 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಡಿಸೆಂಬರ್ 15ರಂದು ಈ ಸಾವಾಗಿದ್ದು, ಡಿಸೆಂಬರ್ 14 ರಂದು ಮಲ್ಲಿಗೆ ಆಸ್ಪತ್ರೆಗೆ ದಾಖಲಾಗಿದ್ದು, ಕೊರೊನಾ ಜೊತೆಗೆ ಅವರಿಗೆ ಹಾರ್ಟ್ ಪ್ರಾಬ್ಲಮ್ ಮತ್ತು ಟಿಬಿ ಇನ್ಪೇಕ್ಷನ್ ಇದ್ದು, ಇತರ ಆರೋಗ್ಯ ಸಮಸ್ಯೆಗಳು ಇದ್ದವು ಎಂದಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಮುನ್ಸುಖ್ ಮಾಂಡವೀಯ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಜತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದು, ಅದರಲ್ಲಿ ಗುಂಡೂರಾವ್ ಭಾಗವಹಿಸಿದ್ದಾರೆ. ಸಭೆಯ ನಂತರ ವಿಕಾಸ ಸೌಧದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪಡೆದಿದೆ. JN.1 ವೈರಸ್​​ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಡಿದೆ. ದೇಶದಲ್ಲಿ 20 JN.1  ಪ್ರಕರಣಗಳು ಪತ್ತೆಯಾಗಿವೆ. ಗೋವಾದಲ್ಲಿ 18, ಮಹಾರಾಷ್ಟ್ರದಲ್ಲಿ 1, ಕೇರಳದಲ್ಲಿ 1 ಕೇಸ್ ಪತ್ತೆಯಾಗಿದೆ ಎಂದು ಗುಂಡೂರಾವ್ ಮಾಹಿತಿ ನೀಡಿದರು.

ಕೋವಿಡ್ ಕುರಿತು ನಾಳೆ ತಾಂತ್ರಿಕ ಸಲಹಾ ಸಮಿತಿ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಆ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚಿಸುತ್ತೇವೆ ಎಂದು ಗುಂಡೂರಾವ್ ತಿಳಿಸಿದರು.

ಹೈರಿಸ್ಕ್ ದೇಶಗಳಿಂದ ಬರುವವರಿಗೆ ಸದ್ಯಕ್ಕೆ ಸ್ಕ್ರೀನಿಂಗ್ ಇಲ್ಲ. ಕೇರಳದಿಂದ ಬರುವ ಅಯ್ಯಪ್ಪ ಭಕ್ತರಿಗೂ ಸ್ಕ್ರೀನಿಂಗ್ ಮಾಡಲು ಹೇಳಿಲ್ಲ. ಕೋವಿಡ್ ಲಕ್ಷಣವಿದ್ದರೆ ಮಾತ್ರ ಪರೀಕ್ಷೆಗೆ ಒಳಪಡಿಸಲು ಸೂಚನೆ ನೀಡಲಾಗಿದೆ. ಕೇರಳ ಗಡಿಯ 4 ಜಿಲ್ಲೆಗಳಲ್ಲಿ ಹೆಚ್ಚು ಕೋವಿಡ್ ಟೆಸ್ಟ್ ಮಾಡಲಾಗುತ್ತದೆ ಎಂದು ಗುಂಡೂರಾವ್ ಮಾಹಿತಿ ನೀಡಿದರು.