ಬೆಂಗಳೂರು: ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸಲು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದರು.
ಇಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜೊತೆಗೆ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳನ್ನು ಗುರುತಿಸಿ, ಅನುದಾನ ಹಂಚಿಕೆ ಮಾಡುವಂತೆ ಸೂಚಿಸಿದರು.
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಇದನ್ನು ಭರಿಸಲು ತೀರ್ಮಾನಿಸಿದ್ದು, 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದೆ. ಆಯವ್ಯಯದಲ್ಲಿ 60 ಕೋಟಿ ರೂ. ನಿಗದಿಯಾಗಿದ್ದು, ಇಲಾಖೆಗೆ ಲಭ್ಯವಿರುವ ಅನುದಾನದಲ್ಲಿಯೇ ಮರುಹಂಚಿಕೆ ಮಾಡಿ ಹೆಚ್ಚುವರಿ 40 ಕೋಟಿ ಭರಿಸಲು ಸಿಎಂ ಸೂಚಿಸಿದರು.
ಅಲ್ಪಸಂಖ್ಯಾತರಿಗೆ ಸವಲತ್ತು ವಿತರಿಸುವ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಭಾರೀ ಪ್ರಮಾಣದಲ್ಲಿ ಅರ್ಜಿ ಸ್ವೀಕೃತವಾಗಿದ್ದು, ಮುಂದಿನ ವರ್ಷ ಇದಕ್ಕೆ ಹೆಚ್ಚಿನ ಅನುದಾನ ಒದಗಿಸಲು ತೀರ್ಮಾನಿಸಲಾಯಿತು. ವಸತಿ ಇಲಾಖೆ ವಿವಿಧ ವಸತಿ ಯೋಜನೆಗಳಡಿ ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣ ಗುರಿಯಿದ್ದು, ಈ ವರೆಗೆ 1.31 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಮುಕ್ತಾಯದ ಹಂತದಲ್ಲಿರುವ 1.6 ಲಕ್ಷ ಮನೆಗಳನ್ನು ಮಾರ್ಚ್ ಒಳಗೆ ಪೂರ್ಣಗೊಳಿಸಬೇಕು. ಈ ಬಗ್ಗೆ ಜಿಲ್ಲಾ ಪಂಚಾಯಿತಿಗಳ ಸಿಇಒಗಳು ಮತ್ತು ಸಂಬಂಧಿಸಿದ ಎಂಜಿನಿಯರರ ಸಭೆ ನಡೆಸಿ, ಲಿಂಟೆಲ್ ಮತ್ತು ಛಾವಣಿ ಹಂತದಲ್ಲಿರುವ ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಮನೆಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ತಿಳಿಸಲು ತಾಕೀತು ಮಾಡಿದರು.










