ಗದಗ: ರಾಕಿಂಗ್ ಸ್ಟಾರ್ ಯಶ್ ಬರ್ತಡೇ ಹಿನ್ನೆಲೆ ಹುಟ್ಟಹಬ್ಬದ ಶುಭಾಶಯ ಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಹನುಮಂತ ಹರಿಜನ್ (24), ಮುರಳಿ ನಡುವಿನಮನಿ (20) ಹಾಗೂ ನವೀನ್ ಗಾಜಿ (20) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಂಜುನಾಥ್, ಪ್ರಕಾಶ್ ಹಾಗೂ ಹನುಮಂತ ಎಂಬವರಿಗೆ ಗಂಭೀರ ಗಾಯಾಳಾಗಿವೆ. ಮಧ್ಯರಾತ್ರಿ 1 ಗಂಟೆ ವೇಳೆ ಕಟೌಟ್ ಕಟ್ಟುವ ವೇಳೆ ಈ ದುರ್ಘಟನೆ ನಡೆದಿದೆ. ಗಾಯಾಳುಗಳನ್ನು ಲಕ್ಷ್ಮೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಸ್ಯಾಂಡಲ್ ವುಡ್ನ ರಾಕಿ ಬಾಗ್, ನಟ ಯಶ್ ಅವರ ಹುಟ್ಟುಹಬ್ಬ ಹಿನ್ನಲೆ ನೀಲಗಿರಿ ತೋಪಿಗೆ ಬ್ಯಾನರ್ ಕಟ್ಟಿ ಮೇಲೆತ್ತುವಾಗ ವಿದ್ಯುತ್ ತಗುಲಿ ಸೂರಣಗಿ ಗ್ರಾಮದ ಮೂವರು ಯುವಕರು ಧಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ತಮ್ಮ ಇಷ್ಟದ ನಟನ ಹುಟ್ಟುಹಬ್ಬವನ್ನು ಗ್ರಾಮದಲ್ಲಿ ಭರ್ಜರಿಯಾಗಿ ಮಾಡಬೇಕೆಂದು ಹತ್ತಾರು ಜನ ಯುವಕರು ಸೇರಿಕೊಂಡು ನಟನ ಕಟೌಟ್ ಕಟ್ಟಲು ಮುಂದಾಗಿದ್ದಾರೆ. ರಾತ್ರಿ ಸಮಯ ಆಗಿದ್ದರಿಂದ ವಿದ್ಯುತ್ ತಂತಿ ಯುವಕರ ಗಮನಕ್ಕೆ ಬಂದಿಲ್ಲ. ಇದರಿಂದ ಈ ದುರ್ಘಟನೆ ಸಂಭವಿಸಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ.
ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










