ಸಿದ್ದರಾಮಯ್ಯ, ಡಿಕೆಶಿ ಬಗ್ಗೆ ಅವಹೇಳನಕಾರಿ ಪೋಸ್ಟ್- ಆರೋಪಿ ಅರೆಸ್ಟ್…

56
firstsuddi

ಮಂಗಳೂರು: ಕರ್ನಾಟಕ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ವ್ಯಕ್ತಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಅನಿಲ್ ಕುಮಾರ್ (34) ಎಂದು ಗುರುತಿಸಲಾಗಿದೆ. ಈತ ಕಳೆದ 12 ವರ್ಷಗಳಿಂದ ಸುರತ್ಕಲ್ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿ ಅನಿಲ್ ಕುಮಾರ್ ವೀಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎನ್ಎಸ್‍ಯುಐ ಮುಖಂಡ ಸುಹಾನ್ ಆಳ್ವಾ ಅವರು ಅನಿಲ್ ಕುಮಾರ್ ಬಂಧನಕ್ಕೆ ಆಗ್ರಹಿಸಿ ಡಿಸಿಪಿ ಕಾನೂನು ಮತ್ತು ಸುವ್ಯವಸ್ಥೆಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಸಂಬಂಧ ಎಫ್ಐಆರ್ ದಾಖಲಿಸಿಕೊಂಡು ಆರೋಪಿ ಅನಿಲ್ ಕುಮಾರ್ ನನ್ನು ಸುರತ್ಕಲ್ ಪೊಲೀಸರು ಸೆಕ್ಷನ್ 153ಎ, 505(ಐ)(ಸಿ), 504 ಐಪಿಸಿ ಅಡಿಯಲ್ಲಿ ಬಂಧಿಸಿದ್ದಾರೆ.

ಆರೋಪಿ ಅನಿಲ್ ಕುಮಾರ್ ಕಳೆದ ಮೂರು ತಿಂಗಳಿನಿಂದ ಮಂಗಳೂರಿನಲ್ಲಿ ಪಡಿತರ ಚೀಟಿಗೆ ಹೆಸರು ಸೇರಿಸಲು ಸರ್ಕಾರಿ ಯೋಜನೆಗಳ ಎಲ್ಲಾ ಪ್ರಯೋಜನಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದರು ಆದರೆ ಅವರ ಪ್ರಯತ್ನ ಯಶಸ್ವಿಯಾಗಿರಲಿಲ್ಲ. ಇದರಿಂದ ಹತಾಶನಾದ ಅನಿಲ್, ಜನವರಿ 16ರಂದು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾನೆ.

ಈ ವೀಡಿಯೋದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಮೊದಲಿಗೆ ಕನ್ನಡದಲ್ಲಿ ನಿಂದಿಸಿ ನಂತರ ತುಳುವಿನಲ್ಲಿ ಕೆಟ್ಟ ಪದಗಳಿಂದ ಬೈದಿರುವುದು ದೃಶ್ಯದಲ್ಲಿದೆ.

ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.