ದಾವಣಗೆರೆ: ನಿಯಂತ್ರಣ ಕಳೆದುಕೊಂಡ ಕಾರೊಂದು ಮರಕ್ಕೆ ಗುದ್ದಿದ ಪರಿಣಾಮ ಪೊಲೀಸ್ ಕಾನ್ಸ್‌ಟೇಬಲ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಜಿಲ್ಲೆಯ ನ್ಯಾಮತಿಯ ದಾನಿಹಳ್ಳಿ ಸಮೀಪ ನಡೆದಿದೆ.
ಸಿದ್ದೇಶ್ (34) ಮೃತ ಪೊಲೀಸ್ ಕಾನ್ಸ್‌ಟೇಬಲ್. ದಾವಣಗೆರೆ ಡಿಎಆರ್ನಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸಿದ್ದೇಶ್ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಬಂಧಿಕರೊಬ್ಬರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿ ಮರಳಿ ಊರಿಗೆ ಕರೆದುಕೊಂಡು ಬರುತ್ತಿದ್ದರು. ಈ ಸಂದರ್ಭದಲ್ಲಿ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದ ಸಿದ್ದೇಶ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ವಿಷಯ ತಿಳಿದು ಘಟನಾ ಸ್ಥಳಕ್ಕೆ ನ್ಯಾಮತಿ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವೇಗದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.










