ಹಾಸನ: ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ವಿಷಸೇವಿಸಿ ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ.
ಮೃತ ಯುವಕನನ್ನು ನಗರನಹಳ್ಳಿ ಗ್ರಾಮದ ರಾಜು (24) ಎಂದು ಗುರುತಿಸಲಾಗಿದೆ. ಮೃತ ಯುವಕ ಡಿಗ್ರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ. ಅಪ್ರಾಪ್ತೆ ಎನ್ನುವ ಕಾರಣಕ್ಕೆ ಮದುವೆಗೆ ನಿರಾಕರಿಸಿ ಪೋಷಕರು, ಬುದ್ಧಿವಾದ ಹೇಳಿದ್ದರು. ಇದರಿಂದ ನೊಂದ ಪ್ರೇಮಿಗಳು ನಿನ್ನೆ ಮಧ್ಯಾಹ್ನ ವಿಷ ಸೇವಿಸಿ, ಹೊಳೆನರಸೀಪುರ ಪಟ್ಟಣದ ಹೇಮಾವತಿ ನದಿ ಸೇತುವೆ ಬಳಿಯ ರೈಲ್ವೇ ಹಳಿ ಮೇಲೆ ಮಲಗಿದ್ದರು. ಹಳಿ ಮೇಲೆ ಒದ್ದಾಡುತ್ತಿದ್ದ ಇಬ್ಬರನ್ನು ನೋಡಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದರು.
ಸ್ಥಳಕ್ಕೆ ದೌಡಾಯಿಸಿ ಪೊಲೀಸರು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಿಸದೆ ಯುವಕ ಮೃತಪಟ್ಟಿದ್ದು, ಅಪ್ರಾಪ್ತೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಕೆ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಸಂಬಂಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










