ಬೆಂಗಳೂರು: ನಕಲಿ ಜಾತಿ ಪ್ರಮಾಣಪತ್ರಗಳನ್ನು ಪಡೆದವರಿಗೆ ನೋಟಿಸ್ ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಪರಿಶಿಷ್ಟ ವರ್ಗಕ್ಕೆ ಬರುವ ನಾಯಕ ಜನಾಂಗದ ಉಪಪಂಡಗಳಾದ ತಳವಾರ, ಪರಿವಾರದ ಹೆಸರಿನಲ್ಲಿ ಬೆಸ್ತರ ಉಪಜಾತಿಗಳಿಗೆ ನಕಲಿ ಪ್ರಮಾಣ ಪತ್ರ ನೀಡಲಾಗುತ್ತಿದೆ ಎಂದು ಆರೋಪಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ಯಾದಗಿರಿಯ ರಾಜ್ಯ ಎಸ್‌ಸಿ ಎಸ್‌ಟಿ ನಕಲಿ ಜಾತಿ ಪ್ರಮಾಣಪತ್ರಗಳ ತಡೆ ಸಮಿತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾ. ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯಪೀಠ ನಡೆಸಿತು.
ನಾಯಕ ಜನಾಂಗದ ಪರಿವಾರ ಮತ್ತು ತಳವಾರ ಉಪಪಂಗಡಗಳನ್ನು ಮಾತ್ರ ಎಸ್‌ಟಿ ವರ್ಗಕ್ಕೆ ಸೇರಿಸಲಾಗಿದೆ. ಆದರೆ, ಪ್ರವರ್ಗ ಒಂದರಲ್ಲಿ ಬರುವ ಬೆಸ್ತರ ಉಪಜಾತಿಯಾದ ಪರಿವಾರ ಹಾಗೂ ತಳವಾರ ಬೋಯಾ ಉಪಪಂಗಡದವರಿಗೂ ಪರಿಶಿಷ್ಟ ವರ್ಗದ ನಕಲಿ ಜಾತಿ ಪ್ರಮಾಣಪತ್ರಗಳನ್ನು ವಿತರಿಸಲಾಗುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಕೆಲ ಕಾಲ ಅರ್ಜಿದಾರರ ಹಾಗೂ ಪ್ರತಿವಾದಿಗಳ ಪರ ವಕೀಲರ ವಾದ ಆಲಿಸಿದ ಬಳಿಕ ನ್ಯಾಯಾಲಯವು, ಅರ್ಜಿಯಲ್ಲಿ ಉಲ್ಲೇಖಿಸಲಾದ ನಕಲಿ ಜಾತಿ ಪ್ರಮಾಣಪತ್ರಗಳು ಹಾಗೂ ಇತರೆ ಅನರ್ಹರಿಗೆ ನೀಡಿದ್ದಾರೆನ್ನಲಾದ ಜಾತಿ ಪ್ರಮಾಣಪತ್ರಗಳ ಕುರಿತು ಸಂಬಂಧಿಸಿದವರಿಗೆ ಮಾ.27ರೊಳಗೆ ನೋಟಿಸ್ ನೀಡಿ ಆದಷ್ಟು ಶೀಘ್ರ ಕ್ರಮ ಜರುಗಿಸಬೇಕು. ಆ ಕುರಿತು ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಸರಕಾರದ ಪರ ವಿಶೇಷ ವಕೀಲರಾದ ಸಿ.ಜಗದೀಶ್‌ಗೆ ಸೂಚನೆ ನೀಡಿತು. ಪ್ರಕರಣದ ವಿಚಾರಣೆಯನ್ನು ಏ.2ಕ್ಕೆ ಮುಂದೂಡಲಾಗಿದೆ.
ಅರ್ಜಿದಾರರು ಬಹಳ ಗಂಭೀರವಾದ ವಿಷಯವನ್ನು ಮುಂದಿಟ್ಟಿದ್ದಾರೆ, ಹಾಗಾಗಿ ಜನರ ಹಿತಾಸಕ್ತಿ ರಕ್ಷಿಸುವ ಹೊಣೆ ಹೊತ್ತಿರುವ ಸರಕಾರ ಅರ್ಜಿದಾರರು ಆರೋಪಿಸಿರುವಂತೆ ನಕಲಿ ಜಾತಿ ಪ್ರಮಾಣಪತ್ರಗಳನ್ನು ಪಡೆದವರಿಗೆ ನೋಟಿಸ್ ನೀಡಿ, ತನಿಖೆ ನಡೆಸಿ, ಸೂಕ್ತ ಕ್ರಮ ಜರುಗಿಸಬೇಕಾಗುತ್ತದೆ ಎಂದು ನ್ಯಾಯಾಲಯ ವಿಚಾರಣೆ ವೇಳೆ ತಿಳಿಸಿದೆ.










