ದೊಡ್ಡಬಳ್ಳಾಪುರ: ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ನಗರದ ರೈಲ್ವೆ ಸ್ಟೇಷನ್ ಸರ್ಕಲ್ನಲ್ಲಿ ಇಂದು ಬೆಳಗ್ಗೆ ನಡೆದಿದೆ.
ನಟರಾಜ್ (50) ಮೃತ ದುರ್ದೈವಿ. ಮೃತ ನಟರಾಜ್ ದೊಡ್ಡಬಳ್ಳಾಪುರ ತಾಲೂಕಿನ ಕೆಸ್ತೂರು ಗ್ರಾಮದವರು ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ ದೊಡ್ಡಬಳ್ಳಾಪುರದಿಂದ ಬೆಂಗಳೂರಿಗೆ ಹೊರಟ್ಟಿದ್ದ ಬಸ್ ಹಾಗೂ ಬಾಶೆಟ್ಟಿಹಳ್ಳಿ ಕಡೆಯಿಂದ ದೊಡ್ಡಬಳ್ಳಾಪುರಕ್ಕೆ ಬರುತ್ತಿದ್ದ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬಸ್ನ ಮುಂಭಾಗದಲ್ಲಿ ಬೈಕ್ ಸಿಲುಕಿಕೊಂಡಿತ್ತು.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತಲೆಗೆ ತೀರ್ವವಾದ ಪೆಟ್ಟು ಬಿದ್ದ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೇ ನಟರಾಜ್ ಮೃತಪಟ್ಟಿದ್ದಾರೆ.
ಈ ಕುರಿತು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










