ವೈಯಕ್ತಿಕ ಕಾರಣಕ್ಕೆ ನೇಹಾ ಕೊಲೆಯಾಗಿದ್ದು, ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಸೂಚಿಸಲಾಗಿದೆ: ಸಿಎಂ ಸಿದ್ದರಾಮಯ್ಯ.

27
firstsuddi

ಬೆಂಗಳೂರು: ವೈಯಕ್ತಿಕ ಕಾರಣಕ್ಕೆ ನೇಹಾ ಕೊಲೆಯಾಗಿದ್ದು, ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಮತ್ತು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಗಂಟೆಗೂ ಹೆಚ್ಚು ಕಾಲ ಸುದೀರ್ಘ ಸಭೆ ನಡೆಸಿದರು. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು. ಆರೋಪಿ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಿ. ಚುನಾವಣಾ ಸಮಯದಲ್ಲಿ ಇಂತಹ ಅಹಿತಕರ ಘಟನೆ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಬಹಳ ಚೆನ್ನಾಗಿದೆ. ಯಾವುದೇ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿರುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರ ಕೆಲಸ. ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುತ್ತೆ ಎಂದರು.

ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಪರಮೇಶ್ವರ್, ಪ್ರಕರಣದಲ್ಲಿ ಲವ್ ಜಿಹಾದ್ ಅಂಶವನ್ನು ತಳ್ಳಿ ಹಾಕಿದರು. ತಮಗೆ ಸಿಕ್ಕಿರುವ ಮಾಹಿತಿ ಪ್ರಕಾರ ಯುವಕ ಮತ್ತು ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಅದರೆ ಯುವತಿ ತನ್ನಿಂದ ದೂರಾವಾಗುತ್ತಿರುವುದು ಗೊತ್ತಾದ ಬಳಿಕ ಯುವಕ ಆಕೆಯ ಹತ್ಯೆ ಮಾಡಿದ್ದಾನೆ. ಇಂತಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ. ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದು  ಪರಮೇಶ್ವರ್ ಹೇಳಿದರು.

ವಿರೋಧ ಪಕ್ಷದ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸುತ್ತಿರುವುದಕ್ಕೆ ಉತ್ತರ ನೀಡಿದ ಅವರು, ಪ್ರತಿಯೊಂದು ವಿಷಯಕ್ಕೆ ಸರ್ಕಾರವನ್ನು ದೂರುವುದು ಬಿಜೆಪಿ ನಾಯಕರಿಗೆ ಅಭ್ಯಾಸವಾಗಿಬಿಟ್ಟಿದೆ. ಅದರಲ್ಲೂ ಈಗ ಚುನಾವಣಾ ಸಮಯವಾಗಿರುವುದರಿಂದ ಇಂಥ ಸೂಕ್ಷ್ಮಸಂವೇದಿ ಸಂಗತಿಗಳನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು ಎಂದು ಪರಮೇಶ್ವರ್ ಹೇಳಿದರು.