ಪ್ರತಿಪಕ್ಷಗಳು ನೇಹಾ ಹತ್ಯೆ ಪ್ರಕರಣವನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ: ಸಿದ್ದರಾಮಯ್ಯ.

30
firstsuddi

ಬೆಂಗಳೂರು: ಪ್ರತಿಪಕ್ಷಗಳು ನೇಹಾ ಹತ್ಯೆ ಪ್ರಕರಣವನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ, ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿಂದು ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೇಹಾ ಕೊಲೆಯನ್ನು ತೀವ್ರವಾಗಿ ಖಂಡಿಸುತ್ತೇನೆ, ಕೊಲೆಗಾರರನ್ನು ಕೂಡಲೇ ಬಂಧಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಹೇಳಿಕೆ ಕುರಿತು ಮಾತನಾಡಿ, ಎಲ್ಲಾ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ, ಖಂಡನೀಯ ಎಂದು ತಿಳಿಸಿದರು.