ನವದೆಹಲಿ: ರಾಜ್ಯ ಸರ್ಕಾರದ ಹೋರಾಟಕ್ಕೆ ಜಯ ಸಿಕ್ಕಿದೆ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3454 ಕೋಟಿ ರೂಪಾಯಿಗಳ ಬರ ಪರಿಹಾರ ಬಿಡುಗಡೆ ಮಾಡಿದೆ. ನೆರೆ ಪರಿಹಾರವೆಂದು ತಮಿಳುನಾಡಿಗೆ 275 ಕೋಟಿ ರೂಪಾಯಿ ಪರಿಹಾರವನ್ನು ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಘೋಷಿಸಿದೆ.
ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,172 ಕೋಟಿ ಹಣ ಬೇಡಿಕೆ ಇಟ್ಟಿತ್ತು. ಬೇಡಿಕೆ ಇಟ್ಟು ಇಷ್ಟು ದಿನಗಳು ಕಳೆದರೂ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರಲಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಬಳಿಕ ಕೇಂದ್ರ ಸರ್ಕಾರ, ಸೋಮವಾರದೊಳಗೆ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಸುಪ್ರೀಂಕೋರ್ಟ್ನಲ್ಲಿ ಒಪ್ಪಿಕೊಂಡಿತ್ತು. ಅದರಂತೆ ಇದೀಗ ಕೇಂದ್ರ ಸರ್ಕಾರ ಬರ ಪರಿಹಾರ ಘೋಷಣೆ ಮಾಡಿದೆ.
ಬರ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ನಡುವೆ ಸಂಘರ್ಷ ತಾರಕಕ್ಕೇರಿ ರಾಜ್ಯಕ್ಕೆ ಬರ ಪರಿಹಾರ ನೀಡುವಲ್ಲಿ ಮೋದಿ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸೇರಿ ಡಿಸಿಎಂ, ಮಂತ್ರಿಗಳು ಸೇರಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಧರಣಿ ನಡೆಸಿದ್ದರು. ಬರ ಪರಿಹಾರ ಸಿಗದಿದ್ದಾಗ ರಾಜ್ಯ ಸರ್ಕಾರ ದೆಹಲಿಯಲ್ಲಿ ಕೂಡ ಪ್ರತಿಭಟನೆ ಮಾಡಿತ್ತು.










