ಹಾಸನ: ರಾಜ್ಯದಲ್ಲಿ ಬಾಲಕರ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ ನಾಲ್ಕು ದಿನಗಳ ಅವಧಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಮೂರು ಸಾವಿನ ಪ್ರಕರಣಗಳು ವರದಿಯಾಗಿದೆ. 11 ವರ್ಷದ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಗ್ರಾಮದ ಕಾವ್ಯಶ್ರೀ ಅವರ ಮಗ ಸಚಿನ್ ಎಂದು ಗುರುತಿಸಲಾಗಿದೆ.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾಘಾತವಾಗಿದೆ. ಇದ್ದಲ್ಲಿಯೇ ಸಚಿನ್ ಕೊನೆಯುಸಿರೆಳೆದಿದ್ದಾರೆ. ನಿನ್ನೆ ಘಟನೆ ನಡೆದಿದ್ದು, ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ಟಿವಿ ನೋಡುತ್ತಲೇ ಕುಸಿದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ. ಆದರೆ ಆಲೂರು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾವನ್ನಪ್ಪಿದ್ದ ಎಂದು ವೈದ್ಯರು ಪೋಷಕರು ತಿಳಿಸಿದ್ದಾರೆ.
ಚಿಕ್ಕವಯಸ್ಸಿನಲ್ಲೇ ಬಾಲಕ ಹೃದಯಾಘಾತಕ್ಕೆ ಬಲಿಯಾಗಿರುವುದು, ಸಾರ್ವಜನಿಕ ವಲಯದಲ್ಲಿ ಆತಂಕ ಮನೆ ಮಾಡುವಂತೆ ಮಾಡಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.










