14 ಲಕ್ಷ ಅನರ್ಹ ಪಡಿತರ ಚೀಟಿಗಳು ರದ್ದುಗೊಳಿಸಿದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ.

35

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಅನರ್ಹರೂ ಕೂಡ ಬಿಪಿಎಲ್ ಪಡಿತರ ಕಾರ್ಡ್ ಹೊಂದಿದ್ದು, ಸರ್ಕಾರದ ವತಿಯಿಂದ ಕಡುಬಡವರಿಗೆ ದೊರೆಯುವ ಅನೇಕ ಸವಲತ್ತುಗಳನ್ನು ಪಡೆಯುತ್ತಿರುವುದನ್ನು ಆಹಾರ ಇಲಾಖೆ ಗಮನಿಸಿ ಕಠಿಣ ಕ್ರಮ ಕೈಗೊಂಡಿದೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಕರ್ನಾಟಕ ರಾಜ್ಯದಲ್ಲಿ ಸುಮಾರು 14 ಲಕ್ಷ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿದೆ ಎಂದು ಸಚಿವ ಕೆ.ಎಚ್ ಮುನಿಯಪ್ಪ ಮಾಹಿತಿ ತಿಳಿಸಿದ್ದಾರೆ. ಅವರು ಹೇಳಿದ ಮಾಹಿತಿಯ ಪ್ರಕಾರ, ಅಧಿಕಾರಿಗಳು 13.87 ಲಕ್ಷ ಅನರ್ಹ ಕಾರ್ಡ್‍ಗಳನ್ನು ಗುರುತಿಸಿದ್ದು, ಅವುಗಳಲ್ಲಿ 3.64 ಲಕ್ಷ ರದ್ದುಗೊಳಿಸಲಾಗಿದೆ. ಇದರಲ್ಲಿ ಸರ್ಕಾರಿ ನೌಕರರ 2,964 ಕಾರ್ಡ್‍ಗಳನ್ನು ರದ್ದುಗೊಳಿಸಲಾಗಿದೆ.
ಕರ್ನಾಟಕ ರಾಜ್ಯದಲ್ಲಿ 4.35 ಕೋಟಿ ಫಲಾನುಭವಿಗಳು 1.51 ಕೋಟಿ ಪಡಿತರ ಕಾರ್ಡ್ ಮೂಲಕ ಸರ್ಕಾರದ ಅನೇಕ ಸವಲತ್ತುಗಳನ್ನು ಪಡೆಯುತ್ತಿದ್ದಾರೆ ಎಂದು ಮುನಿಯಪ್ಪ ತಿಳಿಸಿದ್ದಾರೆ. 6 ತಿಂಗಳವರೆಗೆ ಪಡಿತರ ಪಡೆಯದಿರುವವರು, ಒಂದು ವರ್ಷದವರೆಗೆ ನೇರ ನಗದು ವರ್ಗಾವಣೆ ಸೌಲಭ್ಯ ಪಡೆಯದಿರುವವರು ಮತ್ತು ವರ್ಷದ ನಿಗಧಿತ ಆದಾಯಕ್ಕಿಂತ ಹೆಚ್ಚಿನ ಆದಾಯ ಹೊಂದಿರುವವರನ್ನು ಅನರ್ಹರೆಂದು ಪರಿಗಣಿಸಲಾಗುತ್ತಿದೆ. ಅನರ್ಹ ಪಡಿತರ ಚೀಟಿಗಳ ಸಂಖ್ಯೆ ಸುಮಾರು 20 ಲಕ್ಷಕ್ಕಿಂತ ಹೆಚ್ಚಿರಬಹುದು ಎಂದು ಸಚಿವರು ಅಂದಾಜಿಸಿದ್ದಾರೆ. ಅರ್ಹ ಫಲಾನುಭವಿಗಳು ಸೌಲಭ್ಯ ಪಡೆಯದೇ ಕಾರ್ಡ್ ರದ್ದಾದಲ್ಲಿ ಮುಂದಿನ ದಿನಗಳಲ್ಲಿ ಹೊಸ ಕಾರ್ಡ್‍ಗಳನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ಅನ್ನಭಾಗ್ಯ ಫಲಾನುಭವಿಗೆ ಐದು ಕೆಜಿ ಅಕ್ಕಿ ಬದಲಿಗೆ 170 ರೂ.ಗಳ ನೇರ ನಗದು ವರ್ಗಾವಣೆಯನ್ನು ಮುಂದುವರಿಸಲಾಗುತ್ತದೆ ಹಾಗೂ ಕರ್ನಾಟಕ ರಾಜ್ಯಕ್ಕೆ ಒಂದು ಕೆಜಿ ಅಕ್ಕಿಯನ್ನು 28 ರೂ.ಗೆ ಮಾರಾಟ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಅವರು ಸಚಿವ ಮುನಿಯಪ್ಪ ಹೇಳಿದ್ದಾರೆ. ಹೆಚ್ಚುವರಿಯಾಗಿ ಅಗತ್ಯವಿರುವ 20,000 ಮೆಟ್ರಿಕ್ ಟನ್ ಅಕ್ಕಿಯನ್ನು ರಾಜ್ಯ ಸರ್ಕಾರ ಬೇರೆ ರಾಜ್ಯಗಳಿಂದ ಸಂಗ್ರಹಿಸಲಿದೆ ಎಂದು ಸಚಿವ ಮುನಿಯಪ್ಪ ಮಾಹಿತಿ ನೀಡಿದ್ದಾರೆ.