ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣ: ಬಿ.ನಾಗೇಂದ್ರಗೆ ತುರ್ತು ನೋಟಿಸ್ ನೀಡಿದ ಹೈಕೋರ್ಟ್.

41

ಬೆಂಗಳೂರು: ಈ ಹಿಂದೆ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ.ಗಳ ಅವ್ಯವಹಾರ ಪ್ರಕರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ನೀಡಿರುವ ಜಾಮೀನು ರದ್ದು ಕೋರಿ ಜಾರಿ ನಿರ್ದೇಶನಾಲಯ ಹೈಕೋರ್ಟ್ ಮೆಟ್ಟಿಲೇರಿದೆ. ನ್ಯಾಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಇ.ಡಿ ಜಾರಿ ನಿರ್ದೇಶನಾಲಯದ ಪರ ಹಾಜರಿದ್ದ ಸಹಾಯಕ ಎಸ್.ವಿ.ರಾಜು ಮತ್ತು ಪಿ. ಪ್ರಸನ್ನಕುಮಾರ್, ವಿಚಾರಣಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವ ಕ್ರಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ ಎಂದು ನ್ಯಾಯ ಪೀಠಕ್ಕೆ ವಿವರಿಸಿದರು.
ವಾದವನ್ನು ಆಲಿಸಿದ ನ್ಯಾಯಪೀಠ, ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಿದಾಗ ಪ್ರತಿವಾದಿಗಳ ವಾದವನ್ನು ಕೇಳದೆ ಆದೇಶ ನೀಡುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ಬಿ.ನಾಗೇಂದ್ರ ಅವರಿಗೆ ತುರ್ತು ನೋಟಿಸ್ ಜಾರಿ ಮಾಡುತ್ತಿರುವುದಾಗಿ ತಿಳಿಸಿ ವಿಚಾರಣೆಯನ್ನು ನವೆಂಬರ್ 15ಕ್ಕೆ ವಿಚಾರಣೆಯನ್ನು ಮುಂದೂಡಿತು. ವಾಲ್ಮೀಕಿ ಹಗರಣ ಪ್ರಕರಣದಲ್ಲಿ ನಾಗೇಂದ್ರ ಅವರು ಚುನಾವಣೆ ಬಳಕೆಗೆ ಹಣ ವರ್ಗಾವಣೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಹಾಗೂ ಈ ಕುರಿತಂತೆ ಸಾಕಷ್ಟು ಸಾಕ್ಷ್ಯಗಳನ್ನು ತನಿಖೆಯ ವೇಳೆ ಪತ್ತೆ ಹಚ್ಚಲಾಗಿದೆ. ಹಣ ಅಕ್ರಮ ವರ್ಗಾವಣೆ ಕಾಯ್ದೆ-2002ರ ಕಲಂ 45ರ ಅನುಸಾರ ಆರೋಪಿಗೆ ಜಾಮೀನು ನೀಡಲು ಸಾಧ್ಯವಿಲ್ಲ. ಹಾಗಾಗಿ, ಪ್ರಕರಣದ ಪ್ರಮುಖ ಆರೋಪಿಯಾದ ಬಿ.ನಾಗೇಂದ್ರ ಅವರಿಗೆ ವಿಚಾರಣಾ ನ್ಯಾಯಾಲಯ ನೀಡಿರುವ ಜಾಮೀನು ಆದೇಶವನ್ನು ರದ್ದುಪಡಿಸಬೇಕು ಎಂದು ಇ.ಡಿ ತನ್ನ ಅರ್ಜಿಯಲ್ಲಿ ಪ್ರತಿಪಾದಿಸಿದೆ.