ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಜೋರಾಗಿದೆ ಹಲವೆಡೆ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಗೆ ಇಂದೂ ಸೇರಿದಂತೆ ಮೂರೂ ದಿನಗಳ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಗೂ ರಾಮನಗರಕ್ಕೆ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ನಾಳೆ ಮತ್ತು ನಾಡಿದ್ದು ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ಮುಂದಿನ 24 ಗಂಟೆಗಳ ಕಾಲ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಚಿಕ್ಕಮಗಳೂರು, ರಾಮನಗರ, ಚಾಮರಾಜನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ವರದಿ ಮಾಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇನ್ನು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಂಭವವಿದೆ. ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.










