ಬೆಳಗಾವಿ: ಹಳೆಯ ದ್ವೇಷವನ್ನು ಮನಸ್ಸಿನಲ್ಲಿಟ್ಟುಕೊಂಡು ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬೈಲಹೊಂಗಲ ಗ್ರಾಮದಲ್ಲಿ ನಡೆದಿದೆ. 13ಕ್ಕೂ ಹೆಚ್ಚು ದುಷ್ಕರ್ಮಿಗಳ ತಂಡ ದಾಳಿ ಮಾಡಿದೆ ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡ ಯುವಕನನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ರಕ್ತ ಮಡುವಿನಲ್ಲಿ ಪ್ರಜ್ಞೆತಪ್ಪಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಆಶ್ರಯ ಕಾಲೊನಿ ಶಾಲಾ ಮೈದಾನದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ರವಿ ತಿಮ್ಮನ್ನವರ(23) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.










