ಕಾಲುವೆಗಳಿಂದ ಅಕ್ರಮ ನೀರು ಬಳಕೆ ತಡೆಗೆ ಟಾಸ್ಕ್ ಫೋರ್ಸ್ ರಚನೆ: ಡಿಕೆ.ಶಿವಕುಮಾರ್.

28

ಬೆಂಗಳೂರು: ಕಾಲುವೆಗಳಿಂದ ಅಕ್ರಮವಾಗಿ ನೀರು ಎತ್ತುವುದನ್ನು ತಡೆಯಲು ನೀರಾವರಿ ಇಲಾಖೆ ಅಧಿಕಾರಿಗಳ ಜೊತೆಗೆ ಪಂಪ್ ಸೆಟ್‍ಗಳಿಗೆ ವಿದ್ಯುತ್ ಪೂರೈಸುವ ಇಂಧನ ಇಲಾಖೆ ಅಧಿಕಾರಿಗಳನ್ನು ಒಳಗೊಂಡಂತೆ ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಇಂದು ಹೇಳಿದರು. ಕರ್ನಾಟಕ ನೀರಾವರಿ ತಿದ್ದುಪಡಿ ಕಾಯ್ದೆ– 2024 ರ ಕುರಿತು ಇಲಾಖೆಯ ಅಧಿಕಾರಿಗಳು ಮತ್ತು ಎಂಜಿನಿಯರ್‍ಗಳಿಗೆ ವಿಧಾನಸೌಧದಲ್ಲಿ ನಿನ್ನೆ ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಿಮ್ಮ ಮೇಲೆ ರಾಜಕೀಯ ಒತ್ತಡಗಳಿವೆ ಎಂದು ನನಗೆ ತಿಳಿದಿದೆ. ಹೀಗಾಗಿ, ಈ ತಿದ್ದುಪಡಿಯ ಸಾಧಕ ಬಾಧಕಗಳನ್ನು ಈ ಕಾರ್ಯಾಗಾರದಲ್ಲಿ ಚರ್ಚೆ ಮಾಡಿ ಎಂದು ಹೇಳಿದರು. ಶಾಸಕರು ಹೇಳಿದರು ಎಂಬ ಕಾರಣಕ್ಕೆ ಯೋಜನೆಗಳನ್ನು ಬರೆದು ಕೊಡುತ್ತಿದ್ದೀರಿ. ರೂ.5 ಕೋಟಿವರೆಗೂ ಯೋಜನೆಗಳಿಗೆ ನೀವೇ ಅನುಮತಿ ನೀಡಬಹುದು ಎಂಬ ಕಾರಣಕ್ಕೆ ರೂ.4.99 ಕೋಟಿಯ ಅಂದಾಜು ಬರೆದು ಕೊಡುತ್ತಿದ್ದೀರಿ. ಯಡಿಯೂರಪ್ಪ ಮತ್ತು ಬೊಮ್ಮಾಯಿ ಅವರ ಅಧಿಕಾರಾವಧಿಯಲ್ಲಿ ರಾಜಕೀಯ ಒತ್ತಡದಿಂದ ಎಂಜಿನಿಯರ್‌ಗಳು 5 ಕೋಟಿ ರೂ.ಗಳ ಅಡಿಯಲ್ಲಿ ಯೋಜನೆಗಳನ್ನು ಮಂಜೂರು ಮಾಡುತ್ತಿದ್ದರು. ಬಜೆಟ್‍ನಲ್ಲಿ ಶಿಸ್ತು ಇರಬೇಕು. ನಾಳೆ ಏನಾದರೂ ತಪ್ಪಾದಲ್ಲಿ ಅಧಿಕಾರಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
ಕರ್ನಾಟಕ ನೀರಾವರಿ ತಿದ್ದುಪಡಿ ಅಧಿನಿಯಮ 2024ರಲ್ಲಿ ಬಹಳ ಮಹತ್ತರ ತಿದ್ದುಪಡಿ ತರಲಾಗಿದೆ. ಈ ಕುರಿತು ಇನ್ನಷ್ಟು ಚರ್ಚೆ ನಡೆಯಲಿದ್ದು, ಜನರನ್ನು ಎತ್ತಿಕಟ್ಟುವ ಪ್ರಯತ್ನ ನಡೆಯಲಿದೆ. ರೈತರನ್ನು ಉಳಿಸುವುದು ನಮ್ಮ ಉದ್ದೇಶ. ಒಬ್ಬರಿಗೆ ಒಂದು ಕಾನೂನು ಮತ್ತೊಬ್ಬರಿಗೆ ಬೇರೆ ಕಾನೂನು ಮಾಡಲು ಸಾಧ್ಯವಿಲ್ಲ. ಈ ತಿದ್ದುಪಡಿ ಮೂಲಕ ಉಪ ಆಯುಕ್ತರ ಅಧಿಕಾರವನ್ನು ಸೂಪರಿಂಟೆಂಡೆಂಟ್ ಇಂಜಿನಿಯರ್‍ಗೆ ನೀಡಿದ್ದೇವೆ. ಈ ವಿಚಾರವನ್ನು ನೀವು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದರು.