ಮಂಗಳೂರು: ಹೊಸ ವರ್ಷಾರಂಭದ ಪ್ರಯುಕ್ತ ಕರ್ನಾಟಕ ಕರಾವಳಿಯ ದೇವಸ್ಥಾನಗಳಿಗೆ ಭಕ್ತ ಸಾಗರವೇ ಹರಿದು ಬಂದಿದೆ. ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನ ಹಾಗೂ ಮಂಗಳೂರಿನ ಕದ್ರಿ ಮಂಜುನಾಥ ದೇಗುಲಕ್ಕೆ ಸಾವಿರರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಭಕ್ತರು ದೇವಸ್ಥಾನಗಳಿಗೆ ಹೋಗಿ ದೇವರ ದರ್ಶನ ಪಡೆದು ಹೊಸ ವರ್ಷದ ದಿನಾರಂಭ ಮಾಡುತ್ತಿದ್ದಾರೆ. ಕದ್ರಿ ಮಂಜುನಾಥ ದೇಗುಲಕ್ಕೆ ಬೆಳಗ್ಗಿನಿಂದಲೂ ನೂರಾರು ಭಕ್ತರು ಆಗಮಿಸುತ್ತಿದ್ದಾರೆ. ದೇವಳದ ಕೆರೆಯಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿದ್ದಾರೆ. ಹಾಗೂ ದೇವಳದ ಮುಂದೆ ಕಲಶ ಸ್ನಾನ ಮಾಡುತ್ತಿದ್ದಾರೆ. ಕದ್ರಿ ದೇವಳದಲ್ಲಿ ಕಲಶ ಸ್ನಾನ ಸೇವೆ ಸಾಕಷ್ಟು ಪ್ರಸಿದ್ಧಿ ಪಡೆದಿದೆ. ಹೊಸ ವರ್ಷದ ದಿನಾರಂಭ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಭಕ್ತ ಸಾಗರವೇ ತುಂಬಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರ ಗುಂಪು ಮಂಜುನಾಥ ಸ್ವಾಮಿಯ ದರ್ಶನಕ್ಕೆ ಮುಗಿಬಿದ್ದಿದ್ದಾರೆ. ಬೆಂಗಳೂರು ಹಾಗೂ ಉತ್ತರ ಕರ್ನಾಟಕ ಭಾಗದಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ದೇವಸ್ಥಾನದ ಕ್ಯೂ ಸೆಂಟರ್‍ನಲ್ಲಿ ಭಾರೀ ಸಂಖ್ಯೆಯ ಜನಜಂಗುಳಿ ಏರ್ಪಟ್ಟಿದೆ. ದೇವಸ್ಥಾನದ ಮುಂಭಾಗದಲ್ಲಿಯೂ ಬಹಳ ಸಂಖ್ಯೆಯಲ್ಲಿ ಭಕ್ತ ಸಾಗರ ಸೇರಿದ್ದು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ.










