ಬೆಂಗಳೂರು: 2025-26 ನೇ ಸಾಲಿನ ಬಜೆಟ್ ಅನ್ನು ಹಣಕಾಸು ಇಲಾಖೆಯ ಜವಾಬ್ದಾರಿಯನ್ನೂ ಹೊತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಮಾರ್ಚ್ 14 ರಂದು ಮಂಡಿಸಲಿದ್ದು, ಇದು ಸಿದ್ದರಾಮಯ್ಯ ಅವರ 16ನೇ ದಾಖಲೆಯ ಬಜೆಟ್ ಮಂಡನೆಯಾಗಿದೆ. ರಾಜ್ಯದಲ್ಲಿ ಜುಲೈ 2023ರಲ್ಲಿ 14ನೇ ಬಜೆಟ್ ಮಂಡಿಸಿದಾಗಲೇ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿದೆ. 2024-25ನೇ ಸಾಲಿನ ಬಜೆಟ್ ಅನ್ನು ಫೆಬ್ರವರಿ ತಿಂಗಳಲ್ಲಿ ಮಂಡಿಸಲಾಗಿತ್ತು. ಇದು ಅವರ 15ನೇ ಬಜೆಟ್ ಆಗಿತ್ತು. ಕರ್ನಾಟಕದ ಮಾಜಿ ರಾಜ್ಯಪಾಲರೂ ಆಗಿರುವ ಗುಜರಾತ್ ನ ಮಾಜಿ ಆರ್ಥಿಕ ಸಚಿವ ವಜೂಬಾಯಿ ವಾಲಾ ಅವರು 18 ಬಾರಿ ಬಜೆಟ್ ಮಂಡಿಸುವ ಮೂಲಕ ದೇಶದಲ್ಲೇ ದಾಖಲೆ ನಿರ್ಮಿಸಿದ್ದಾರೆ. ಈ ದಾಖಲೆಯನ್ನು ಮುರಿಯಬೇಕೆಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನೂ 2 ಬಜೆಟ್ ಗಳನ್ನು ಮಂಡಿಸಬೇಕಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 16ನೇ ಬಜೆಟ್ ಹಲವು ವೈಶಿಷ್ಠ್ಯಗಳನ್ನು ಹೊಂದಿದೆ. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂಪಾಯಿಗಳನ್ನು ದಾಟಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.










