ಹಸುಗಳ ಕೆಚ್ಚಲು ಕತ್ತರಿಸಿದ ಘಟನೆ, ಒಬ್ಬನ ಬಂಧನ.

32

ಬೆಂಗಳೂರು: ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕತ್ತರಿಸಿ ಕ್ರೌರ್ಯ ಮೆರೆದ ಘಟನೆಗೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಸೈಯದ್ ನಸ್ರು ಬಂಧಿತ ಆರೋಪಿ. ಬಿಹಾರದ ಚಂಪರಣ್ ಮೂಲದ ಆರೋಪಿ ಸೈಯದ್ ನಸ್ರು, ಕೃತ್ಯ ನಡೆದ ಸ್ಥಳದಿಂದ ಐವತ್ತು ಮೀಟರ್ ಅಂತರದಲ್ಲಿರುವ ಪ್ಲ್ಯಾಸ್ಟಿಕ್, ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿಸಲಾಗಿದೆ. ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ಆರೋಪಿ ಸೈಯದ್ ನಸ್ರು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾನೆ. ಪೊಲೀಸರು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಜ.24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರ ನಿವಾಸಿ ಕರ್ಣ ಎಂಬುವರು ಕಳೆದ ಹಲವು ವರ್ಷಗಳಿಂದ ಇಲ್ಲಿ ಹಸು ಸಾಕುತ್ತಿದ್ದಾರೆ. ಶನಿವಾರ ತಡರಾತ್ರಿ ಯಾರೋ ಕಿಡಿಗೇಡಿಗಳು 3 ಹಸುಗಳ ಕೆಚ್ಚಲನ್ನು ಕೊಯ್ದು, ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದರು. ಹಸುಗಳ ಮಾಲೀಕ ಕರ್ಣ ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ಆಧರಿಸಿ ಪ್ರರಕಣ ದಾಖಲಿಸಿಕೊಂಡ ಪೊಲೀಸರು ನಿನ್ನೆ ರಾತ್ರಿ ಒಬ್ಬ ಆರೋಪಿಯನ್ನು ಬಂಧಿಸಿ, ತನಿಖೆ ನಡೆಸಿದ್ದಾರೆ. ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ರಮೇಶ್ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.