ರಾಜಕೀಯ ಪಿತೂರಿಯಿಂದ ಮುಖ್ಯಮಂತ್ರಿ ಪತ್ನಿಗೆ ಇಡಿ ನೋಟಿಸ್ ನೀಡಿದೆ: ಡಿ.ಕೆ ಶಿವಕುಮಾರ್.

34

ಬೆಂಗಳೂರು: ರಾಜಕೀಯ ಪಿತೂರಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರೋಪಿಸಿದರು. ಸದಾಶಿವನಗರ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ ಎಂದು ಕೇಳಿದಾಗ, ನನ್ನ ವಿರುದ್ಧದ ಪ್ರಕರಣದಲ್ಲೂ ಹೀಗೆ ಆಗಿತ್ತು. ಒಂದು ಪ್ರಕರಣವನ್ನು ಒಂದೇ ಸಮಯದಲ್ಲಿ 2 ಸಂಸ್ಥೆಗಳು ತನಿಖೆ ನಡೆಸಲು ಸಾಧ್ಯವಿಲ್ಲ. ಲೋಕಾಯುಕ್ತ ಸಂಸ್ಥೆ ಈಗಾಗಲೇ ತನಿಖೆ ಮಾಡುತ್ತಿದೆ. ಲೋಕಾಯುಕ್ತ ತನಿಖೆ ನಡೆಸುತ್ತಿರುವಾಗ ಬೇರೆ ಸಂಸ್ಥೆಗಳು ತನಿಖೆ ನಡೆಸಲು ಆಗುವುದಿಲ್ಲ ಎಂದು ನ್ಯಾಯಾಲಯಗಳು ಅನೇಕ ತೀರ್ಪು ನೀಡಿವೆ. ಈ ವಿಚಾರವಾಗಿ ಸಂಪೂರ್ಣ ಮಾಹಿತಿ ಪಡೆದ ಬಳಿಕ ನಾನು ಮಾತನಾಡುತ್ತೇನೆ ಎಂದು ತಿಳಿಸಿದರು. ಮುಡಾ ಪ್ರಕರಣ ಸಿಬಿಐ ತನಿಖೆ ನೀಡಬೇಕು ಎಂಬ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ನನ್ನ ಪ್ರಕರಣದಲ್ಲೂ ಸಿಬಿಐ ಹಾಗೂ ಇಡಿ ಒಟ್ಟಿಗೆ ತನಿಖೆ ಮಾಡುತ್ತಿದ್ದವು. ಯಾವುದೇ ಸಂಸ್ಥೆಗಳಾಗಲಿ ಒಟ್ಟಿಗೆ ಒಂದೇ ಪ್ರಕರಣವನ್ನು 2 ಸಂಸ್ಥೆಗಳು ತನಿಖೆ ಮಾಡುವಂತಿಲ್ಲ. ಈ ಕುರಿತಾಗಿ ಬಂದಿರುವ ನ್ಯಾಯಾಲಯದ ತೀರ್ಪುಗಳನ್ನು ನನ್ನ ಪ್ರಕರಣದಲ್ಲಿ ನ್ಯಾಯಾಲಯದ ಮುಂದೆ ಪ್ರಸ್ತಾಪ ಮಾಡಿದ್ದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.