ನವದೆಹಲಿ: ಬಿಜೆಪಿ ಕೊಟ್ಟ ದೂರಿನ ಆಧಾರದ ಮೇಲೆ, ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ತಮ್ಮ ಪಕ್ಷದ ಶಾಸಕರಿಗೆ ಬಿಜೆಪಿ 15 ಕೋಟಿ ಆಮಿಷ ಒಡ್ಡಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ದೂರು ನೀಡಿತ್ತು. ದೆಹಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿಷ್ಣು ಮಿತ್ತಲ್ ಅವರು ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಕಚೇರಿಗೆ ಸಲ್ಲಿಸಿದ ದೂರಿನ ಆಧಾರದ ಮೇಲೆ ಎಸಿಬಿ ತನಿಖೆಗೆ ಆದೇಶಿಸುವಂತೆ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಲಾಗಿದೆ. ಇದರ ಬೆನ್ನಲ್ಲೇ ಎಸಿಬಿ ಅಧಿಕಾರಿಗಳು ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿ ತೀವ್ರ ಶೋಧ ನಡೆಸುತ್ತಿದ್ದಾರೆ ಎನ್ನಲಾಗಿದೆ. ಎಎಪಿ ಕಾನೂನು ಘಟಕದ ಅಧ್ಯಕ್ಷ ಸಂಜೀವ್ ನಾಸಿಯರ್ ಅವರು, ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ ಎಸಿಬಿ ದಾಳಿಯನ್ನು ಪ್ರಶ್ನಿಸಿದ್ದು, ಇದು ತುಂಬಾ ಆಶ್ಚರ್ಯಕರ ಎಂದಿದ್ದಾರೆ. ಎಸಿಬಿ ಅಧಿಕಾರಿಗಳ ಬಳಿ ಯಾವುದೇ ದಾಖಲೆಗಳು ಅಥವಾ ಸೂಚನೆ ಇಲ್ಲ ಮತ್ತು ನಿರಂತರವಾಗಿ ಫೋನ್ ಕರೆಗಳಲ್ಲಿದ್ದರು ಎಂದು ಅವರು ಹೇಳಿದ್ದಾರೆ. ಅಧಿಕಾರಿಗಳು ಯಾರ ಆದೇಶದ ಮೇರೆಗೆ ಮಾಜಿ ಮುಖ್ಯಮಂತ್ರಿ ಮನೆಗೆ ಆಗಮಿಸಿದ್ದಾರೆ ಎಂದು ಪ್ರಶ್ನಿಸಿದ ಅವರು, ರಾಜಕೀಯ ನಾಟಕ ಸೃಷ್ಟಿಸಲು ಬಿಜೆಪಿ ನಡೆಸುತ್ತಿರುವ ಪಿತೂರಿ ಇದು. ಶೀಘ್ರದಲ್ಲೇ ಇದು ಬಹಿರಂಗವಾಗಲಿದೆ ಎಂದು ನಾಸಿಯರ್ ಹೇಳಿದ್ದಾರೆ.










