ಜಲ ಜೀವನ್ ಮಿಷನ್ ಕುರಿತು ಬಿಜೆಪಿ ಸುಳ್ಳು ಹರಡುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ.

46

ಬೆಂಗಳೂರು: ಕೇಂದ್ರ ಸರ್ಕಾರ ಜಲ ಜೀವನ್ ಮಿಷನ್‍ಗೆ ಸಂಬಂಧಿಸಿದಂತೆ ರಾಜ್ಯಕ್ಕೆ ಘೋಷಿಸಿದ ಹಣವನ್ನು ಬಿಡುಗಡೆ ಮಾಡದೆ ಕರ್ನಾಟಕಕ್ಕೆ ದ್ರೋಹ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಇಂದು ಬಿಜೆಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿ ಸುಳ್ಳು ಹರಡುತ್ತಿದೆ ಎಂದು ಆರೋಪಿಸಿದರು. ಜೆಜೆಎಂ ಅಡಿಯಲ್ಲಿ ಕರ್ನಾಟಕಕ್ಕೆ 28,623 ಕೋಟಿ ರೂಪಾಯಿ ಹಂಚಿಕೆ ಮಾಡಲಾಗಿದೆ. ಆದರೆ ರಾಜ್ಯವು 11,760 ಕೋಟಿ ರೂಪಾಯಿ ಮಾತ್ರ ಖರ್ಚು ಮಾಡಿದೆ ಎಂದು ಸೋಮಣ್ಣ ಲೋಕಸಭೆಗೆ ತಿಳಿಸಿದ್ದಾರೆ ಎಂದು ಮಾಧ್ಯಮ ವರದಿ ಮಾಡಿವೆ. ಕೇಂದ್ರ ಸರ್ಕಾರವು ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಅನ್ನು ಉದ್ದೇಶಪೂರ್ವಕವಾಗಿ ಹಾಳುಗೆಡವಿರುವುದನ್ನು ಮುಚ್ಚಿಹಾಕಲು ಕೇಂದ್ರ ಸಚಿವ ಸೋಮಣ್ಣ ಸುಳ್ಳು ಹರಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.