ಮಲಪ್ರಭಾ ಜಲಾಶಯದಿಂದ ಇನ್ನೂ 15 ದಿನ ಕಾಲುವೆಗಳಿಗೆ ನೀರು: ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ.

35

ಬೆಳಗಾವಿ: ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆ.15ರಿಂದ ಸ್ಥಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆ ಹಿನ್ನೆಲೆಯಲ್ಲಿ ಕೈಬಿಟ್ಟು, ಮಾ.1ರವರೆಗೂ ನೀರು ಬಿಡುವಂತೆ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅಧ್ಯಕ್ಷತೆಯಲ್ಲಿ ಅ.15ರಂದು ನಡೆದ ಸಭೆಯಲ್ಲಿ ಶಾಸಕರುಗಳು, ಮಹಾಮಂಡಳದ ಅಧ್ಯಕ್ಷರು, ರೈತರು, ಮುಖಂಡರೊಂದಿಗೆ ಚರ್ಚಿಸಿ, ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಪ್ರಸಕ್ತ 2024-25ನೇ ಸಾಲಿನಲ್ಲಿ ಮುಂಗಾರು ಹಂಗಾಮಿಗಾಗಿ 14.87 ಟಿಎಂಸಿ ಹಾಗೂ ಹಿಂಗಾರು ಹಂಗಾಮಿಗೆ 16 ಟಿಎಂಸಿ ಸೇರಿ ಒಟ್ಟಾರೆ 30.842 ಟಿಎಂಸಿ ನೀರನ್ನು ಮಲಪ್ರಭಾ ಜಲಾಶಯದಿಂದ ನೀರಾವರಿಗಾಗಿ ಒದಗಿಸಲಾಗಿದೆ. ಅದರಂತೆ ಮಲಪ್ರಭಾ ಜಲಾಶಯದಿಂದ ನೀರಾವರಿಗಾಗಿ ಒಳಪಡುವ ಕಾಲುವೆಗಳ ಮುಖಾಂತರ ಫೆ.14ರವರೆಗೆ 16 ಟಿಎಂಸಿ ನೀರನ್ನು ನೀರಾವರಿ ಉದ್ದೇಶಕ್ಕೆ ರೈತರಿಗೆ ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ.
ಪ್ರಸ್ತುತ ಎರಡೂ ಹಂಗಾಮುಗಳು ಮುಗಿದಿದ್ದರೂ ಸಹ, ನರಗುಂದ ಹಾಗೂ ಬಾದಾಮಿ ಶಾಸಕರು ಹಾಗೂ ರೈತ ಮುಖಂಡರು ನೀರನ್ನು ಕಾಲುವೆಗಳಿಗೆ ಮಾ.15ರವರೆಗೆ ಮುಂದುವರೆಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಲ್ಲಿ ಮನವಿ ಮಾಡಿದ್ದಾರೆ. ಆ ಹಿನ್ನೆಲೆಯಲ್ಲಿ ರೈತರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಫೆ.15ಕ್ಕೆ ಸ್ಥಗಿತಗೊಳಿಸಬೇಕಾಗಿದ್ದ ನೀರನ್ನು ಮಾ.1ರ ವರೆಗೆ ನೀರಾವರಿ ಕಾಲುವೆಗಳ ಮುಖಾಂತರ ಹರಿಸುವುದನ್ನು ಮುಂದುವರೆಸಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಕೆರೆ ತುಂಬಿಸಲು ಕ್ರಮ ವಹಿಸಿ: ಅಲ್ಲದೇ, ಅವಶ್ಯಕ ಕುಡಿಯುವ ನೀರಿಗಾಗಿ ಜೂನ್ ಅಂತ್ಯದವರೆಗೆ 15 ಟಿಎಂಸಿ ನೀರನ್ನು ಕಾಯ್ದಿರಿಸಿ ಒದಗಿಸಲು ಸಚಿವರು ಸೂಚಿಸಿದ್ದಾರೆ. ಜೊತೆಗೆ ಮಾರ್ಚ್ 1ರೊಳಗಾಗಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಕುಡಿಯುವ ನೀರಿಗಾಗಿ ತಮ್ಮ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳಬೇಕು ಅಂತಲೂ ಲಕ್ಷ್ಮೀ ಹೆಬ್ಬಾಳ್ಕರ್ ಸೂಚಿಸಿದ್ದಾರೆ.