ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ತುಮಕೂರು ಮೂಲದ ಮೂವರ ದುರ್ಮರಣ, ಇಬ್ಬರಿಗೆ ಗಂಭೀರ ಗಾಯ

2

ಕೊಟ್ಟಿಗೆಹಾರ: ವಿಲ್ಪುರಂ–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತುಮಕೂರು ಜಿಲ್ಲೆಯ ಒಂದೇ ಗ್ರಾಮದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಮೃತರನ್ನು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹಳಿಲ್ ಗದ್ದೆ ಗ್ರಾಮದ ನಿವಾಸಿಗಳಾದ ಜ್ಞಾನೇಶ, ಮೋಹನ ಹಾಗೂ ಗುರುಕಿರಣ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಪ್ರೇಮ್ ಮತ್ತು ಹೃತಿಕ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿಗೆ ಹಿಂಬದಿಯಿಂದ ಡಿಕ್ಕಿ
ಮೃತರು ಹಾಗೂ ಗಾಯಾಳುಗಳು ತುಮಕೂರಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ದರ್ಶನಕ್ಕಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ ಬಳಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಕಾರು ಹಿಂಬದಿಯಿಂದ ವೇಗವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಯುವಕರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಶಬ್ದ ಕೇಳಿ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ, ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ಕರೆದೊಯ್ಯಲು ನೆರವಾಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಬಣಕಲ್ ಪೊಲೀಸರು  ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತದ ಕಾರಣ ಹಾಗೂ ಇತರೆ ವಿವರಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.