ಮೂಡಿಗೆರೆ: ಪಟ್ಟಣದಲ್ಲೂ ಇಂದು ಹಿಂದೂ ಮಹಾ ಗಣಪತಿ ವಿಸರ್ಜನ ಮಹೋತ್ಸವ ನಡೆಯಲಿದ್ದು, ಅದ್ಧೂರಿ ಮೆರವಣಿಗೆಗೆ ಸಿದ್ಧತೆ ನಡೆದಿದೆ. ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಪಟ್ಟಣದಾದ್ಯಂತ ಪೊಲೀಸ್ ಬಂದೋಬಸ್ತ್ ಬಿಗಿಗೊಳಿಸಲಾಗಿದೆ.
ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ವಿಶೇಷ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡದಂತೆ ಪೊಲೀಸ್ ಸಿಬ್ಬಂದಿ ಕಟ್ಟೆಚ್ಚರ ವಹಿಸಿದ್ದಾರೆ.
ಮೆರವಣಿಗೆಯ ಸಂದರ್ಭದಲ್ಲಿ ಡ್ರೋನ್ ಕ್ಯಾಮೆರಾ, ಸಿಸಿಟಿವಿ ಹಾಗೂ ಮೊಬೈಲ್ ಗಸ್ತು ತಂಡಗಳ ಮೂಲಕ ನಿರಂತರ ನಿಗಾ ಇರಿಸಲಾಗುತ್ತದೆ. ಅಗತ್ಯವಿರುವ ಕಡೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಮೆರವಣಿಗೆ ಹಿನ್ನೆಲೆಯಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದ್ದು, ಸಾರ್ವಜನಿಕರು ಪರ್ಯಾಯ ಮಾರ್ಗ ಬಳಸುವಂತೆ ಸೂಚಿಸಲಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಮೂಡಿಗೆರೆ ಪಟ್ಟಣದಲ್ಲೂ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.
ಗಣಪತಿ ವಿಸರ್ಜನ ಮೆರವಣಿಗೆಯಲ್ಲಿ ಭಾಗವಹಿಸುವ ಭಕ್ತರು ಶಾಂತಿ ಮತ್ತು ಸೌಹಾರ್ದತೆ ಕಾಪಾಡಿಕೊಂಡು, ಪೊಲೀಸ್ ಇಲಾಖೆ ನೀಡುವ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.










