ಚಿತ್ರದುರ್ಗ : ಬಸ್ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೊಳಕಾಲ್ಮೂರಿನ ಬಿಜಿ ಕೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಮಹೇಶ್ (19), ರತ್ನಮ್ಮ (38), ದುರ್ಗಪ್ಪ (16). ಹಾಗೂ ತಿಮ್ಮಣ್ಣ (40) ಎಂದು ಗುರುತಿಸಲಾಗಿದೆ. ಮೃತರು ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನವರಾಗಿದ್ದು, ಉದ್ಯೋಗ ಅರಸಿ ಕ್ರೂಸರ್ ನಲ್ಲಿ ಒಟ್ಟು 22 ಮಂದಿ ಕಾರ್ಮಿಕರು ಬಿಜಿ ಕೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಬೆಂಗಳೂರು ಕಡೆಗೆ ಹೊರಟಿದ್ದರು. ಈ ವೇಳೆ ಎದುರಿಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಕ್ರೂಸರ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆಯಲ್ಲಿ 10 ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.










