ನವದೆಹಲಿ: ಶ್ರೀಶಾಂತ್ ಮೇಲೆ ಅಜೀವ ನಿಷೇಧ ವಿಧಿಸಿರುವ ಹಿನ್ನೆಲೆಯಲ್ಲಿ ವಿವರಣೆ ನೀಡುವಂತೆ ಸುಪ್ರೀಂ ಕೋರ್ಟ್ ಬಿಸಿಸಿಐಗೆ ನೋಟಿಸ್ ಜಾರಿ ಮಾಡಿದೆ. ಬಿಸಿಸಿಐ ಅಜೀವ ನಿಷೇಧ ವಿಧಿಸಿದ್ದನ್ನು ಪ್ರಶ್ನಿಸಿ ಶ್ರೀಶಾಂತ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಇಂದು ಮುಖ್ಯ ನ್ಯಾ.ದೀಪಕ್ ಮಿಶ್ರಾ, ನ್ಯಾ.ಎಎಂ ಖಾನ್ವಿಲ್ಕರ್ ಮತ್ತು ನ್ಯಾ.ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ಪೀಠ ನಿಷೇಧ ಸಂಬಂಧ ನಾಲ್ಕು ವಾರಗಳಲ್ಲಿ ವಿವರಣೆ ನೀಡುವಂತೆ ಬಿಸಿಸಿಐಗೆ ನೋಟಿಸ್ ಜಾರಿ ಮಾಡಿತು. ಬಿಸಿಸಿಐ ಆರೋಪಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿ ಉತ್ತರಿಸುವಂತೆ ಶ್ರೀಶಾಂತ್ ಅವರಿಗೂ ಕೋರ್ಟ್ ನಾಲ್ಕು ವಾರಗಳ ಕಾಲ ಸಮಯಾವಕಾಶ ನೀಡಿತು.
ಬಿಸಿಸಿಐ ಪರ ಹಿರಿಯ ವಕೀಲ ಪ್ರರಾಗ್ ತ್ರಿಪಾಠಿ ನ್ಯಾಯಾಲಯ ನೋಟಿಸ್ ಸ್ವೀಕರಿಸಿದರು. ಶ್ರೀಶಾಂತ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಲ್ಮಾನ್ ಖುರ್ಷಿದ್, ಕೇರಳ ಹೈಕೋರ್ಟ್ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಶ್ರೀಶಾಂತ್ ಅವರಿಗೆ ಕ್ಲೀನ್ ಚಿಟ್ ನೀಡಿದೆ. ಆದರೂ ಅವರ ಮೇಲೆ ಅಜೀವ ನಿಷೇಧ ಹೇರಿದ ಕ್ರಮ ಸರಿಯಲ್ಲ ಎಂದು ವಾದಿಸಿದರು.2013 ರ ಐಪಿಎಲ್ ವೇಳೆ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಶ್ರೀಶಾಂತ್ ಮೇಲೆ ಬಿಸಿಸಿಐ ಅಜೀವ ನಿಷೇಧ ವಿಧಿಸಿತ್ತು. ಅಜೀವ ನಿಷೇಧವನ್ನು ಪ್ರಶ್ನಿಸಿ ಶ್ರೀಶಾಂತ್ ಕೇರಳ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ವೇಳೆ ಕೇರಳ ಹೈಕೋರ್ಟ್ ಏಕಸದಸ್ಯ ಪೀಠ 2017ರ ಆಗಸ್ಟ್ ನಲ್ಲಿ ಸಾಕ್ಷ್ಯಧಾರಗಳ ಕೊರತೆಯಿಂದಾಗಿ ಅಜೀವ ನಿಷೇಧವನ್ನು ತೆರವುಗೊಳಿಸುವಂತೆ ಬಿಸಿಸಿಐಗೆ ಆದೇಶಿಸಿತ್ತು.
ಈ ಆದೇಶದ ಬಳಿಕ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಬೇಕೆಂದು ಬಿಸಿಸಿಐ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ನ ದ್ವಿಸದಸ್ಯ ಪೀಠ ಎತ್ತಿ ಹಿಡಿದಿತ್ತು. ವಿಭಾಗಿಯ ಪೀಠದ ಆದೇಶವನ್ನು ಪ್ರಶ್ನಿಸಿ ಶ್ರೀಶಾಂತ್ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. 2013 ರಲ್ಲಿ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಶ್ರೀಶಾಂತ್ ಜೊತೆಗೆ ರಾಜಸ್ಥಾನ ರಾಯಲ್ಸ್ ತಂಡದ ಅಜಿತ್ ಚಾಂಡೀಲ, ಅಂಕಿತ್ ಚೌಹಣ್, ಅಲ್ಲದೇ ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ ರಾಯಲ್ಸ್ ತಂಡಗಳನ್ನು ಬಿಸಿಸಿಐ ಎರಡು ವರ್ಷಗಳ ಕಾಲ ನಿಷೇಧಿಸಿತ್ತು. ಆದರೆ ಕೋರ್ಟ್ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಿದ ನಂತರವು ಬಿಸಿಸಿಐ ಶ್ರೀಶಾಂತ್ ಮೇಲಿನ ಅಜೀವ ನಿಷೇಧವನ್ನು ಹಿಂಪಡೆಯಲು ನಿರಾಕರಿಸಿತ್ತು.