ಬೆಂಗಳೂರು : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿರುವುದನ್ನು ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಡಿ.ಕೆ. ಶಿವಕುಮಾರ್ ಅವರ ಬೆಂಗಳೂರು, ಮುಂಬೈ ಹಾಗೂ ದೆಹಲಿ ಸೇರಿದಂತೆ 14 ಕಡೆ ಏಕಕಾಲದಲ್ಲಿ 60ಕ್ಕೂ ಹೆಚ್ಚು ಮಂದಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಶೋಧಕಾರ್ಯ ನಡೆಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಡಿಕೆಶಿ ಬೆಂಬಲಿಗರು ಸದಾಶಿವ ನಗರದ ಅವರ ನಿವಾಸದ ಮುಂಭಾಗದಲ್ಲಿ ನೂರಾರು ಕಾರ್ಯಕರ್ತರು ಜಮಾಯಿಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ.










