ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಸಿಬಿಐ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದು, ಮನೆಯ ಮೇಲೆ ರೇಡ್ ಮಾಡಿದ್ದಾರೆ. ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ಅವರ ನಿವಾಸದ ಮೇಲೆ ಇಂದು ಐವರು ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಳಗ್ಗೆ ಸಿಬಿಐ ಅಧಿಕಾರಿಗಳು ಏಕಾಏಕಿ ದಾಳಿ ಮಾಡಿದ್ದು, ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಡಿಕೆಶಿಗೆ ಸೇರಿದ ಹಲವು ಕಡೆಗಳಲ್ಲಿ ಕೂಡ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಅವರ ಮನೆಯ ಮೇಲೂ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದು, ಅವರ ಮನೆಯಲ್ಲೂ ಶೋಧಕಾರ್ಯ ನಡೆಸುತ್ತಿದ್ದಾರೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕನಕಪುರ, ದೆಹಲಿ, ಮುಂಬೈ ಸೇರಿದಂತೆ ಒಟ್ಟು 14 ಕಡೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.










