ಚಿಕ್ಕಮಗಳೂರು : ಮಕ್ಕಳು ವಿದ್ಯಾರ್ಥಿ ದೆಸೆಯಲ್ಲೇ ರಾಷ್ಟ್ರಪ್ರೇಮ, ದೇಶಭಕ್ತಿ ಮತ್ತು ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು : ಜಗದೀಶಾಚಾರ್.

305
firstsuddi

ಚಿಕ್ಕಮಗಳೂರು : ಮಕ್ಕಳು ವಿದ್ಯಾರ್ಥಿ ದೆಸೆಯಲ್ಲೇ ರಾಷ್ಟ್ರಪ್ರೇಮ, ದೇಶಭಕ್ತಿ ಮತ್ತು ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಜಗದೀಶಾಚಾರ್ ಸಲಹೆ ಮಾಡಿದರು.
ಭಾರತ ಸೇವಾದಳದ ಜ್ಞಾನಜ್ಯೋತಿ ಘಟಕ ನಗರದ ಆಜಾದ್ ಪಾರ್ಕ್ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಭಾರತ ಸೇವಾದಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬದುಕಿನಲ್ಲಿ ಉತ್ತಮ ನಡವಳಿಕೆ ಮತ್ತು ಶಿಸ್ತು ಅತ್ಯಂತ ಮುಖ್ಯ ಅದನ್ನು ಭಾರತ ಸೇವಾದಳ ಕಲಿಸುತ್ತದೆ ಹಾಗಾಗಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇವಾದಳವನ್ನು ಸೇರಬೇಕು ಎಂದು ಕಿವಿಮಾತು ಹೇಳಿದರು.
ಭಾರತ ಸೇವಾದಳದ ಜಿಲ್ಲಾ ಕಾರ್ಯದರ್ಶಿ ಎಂ.ಹಂಪಯ್ಯ ಮಾತನಾಡಿ ವಿದ್ಯಾರ್ಥಿಗಳಲ್ಲಿ ಶಿಸ್ತನ್ನು ಬೆಳೆಸುವ ನಿಟ್ಟಿನಲ್ಲಿ ಎಲ್ಲಾ ಶಾಲೆಗಳಲ್ಲೂ ಭಾರತ ಸೇವಾದಳ ಶಾಖೆಯನ್ನು ಸ್ಥಾಪಿಸಬೇಕು ಎಂದು ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಭಾರತ ಸೇವಾದಳದ ತಾಲ್ಲೂಕು ಸಂಘಟಕ ಎಸ್.ಈ.ಲೋಕೇಶ್ವರಾಚಾರ್ ಸೇವಾದಳ ದಿನಾಚರಣೆಯನ್ನು ಸಪ್ತಾಹವನ್ನಾಗಿ ಆಚರಿಸುತ್ತಿದ್ದು 7 ದಿನಗಳ ಕಾಲ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಗುವುದು ಎಂದು ಹೇಳಿದರು.
ಮುಖ್ಯ ಶಿಕ್ಷಕಿ ಬಿ.ಆರ್.ಗೀತಾ ಅಧ್ಯಕ್ಷತೆ ವಹಿಸಿದ್ದರು, ಭಾರತ ಸೇವಾದಳದ ಜಿಲ್ಲಾ ಸಂಘಟಕ ಚಂದ್ರಕಾಂತ್, ಶಿಕ್ಷಕರಾದ ಜಯಂತಿ, ನಾಗವೇಣಿ ಉಪಸ್ಥಿತರಿದ್ದರು