ನವದೆಹಲಿ:ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಿಯೋಗ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ 2,000 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದು,ಕೊಡಗು ಮತ್ತು ನೆರೆಯ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಸತತ ಭಾರಿ ಮಳೆಯಿಂದಾಗಿ ಪ್ರವಾಹ ಹಾಗೂ ಭೂ ಕುಸಿತ ಉಂಟಾಗಿ ಜನ-ಜಾನುವಾರುಗಳು ಜೀವ ಕಳೆದುಕೊಂಡಿದ್ದು, ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ. ಕೃಷಿ, ತೋಟಗಾರಿಕೆ ಹಾಗೂ ವಾಣಿಜ್ಯ ಬೆಳೆಗಳಿಗೆ, ಮೂಲ ಸೌಕರ್ಯ, ಮನೆಗಳಿಗೆ ತೀವ್ರ ಹಾನಿಯುಂಟಾಗಿದೆ. ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅತಿವೃಷ್ಟಿ ಹಾಗೂ ಒಳನಾಡಿನಲ್ಲಿ ಬರ ಪರಿಸ್ಥಿತಿ ತಲೆದೋರಿರುವ ಬಗ್ಗೆ ಮನವರಿಕೆ ಮಾಡಿ, ಕೊಡಗು ಹಾಗೂ ನೆರೆಯ ಜಿಲ್ಲೆಗಳಿಗೆ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗಾಗಿ 2000 ಕೋಟಿ ರೂ.ಗಳ ಪ್ಯಾಕೇಜ್ ಘೋಷಿಸಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದು, ಮನವಿಗೆ ಪ್ರಧಾನಮಂತ್ರಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದು ಬಂದಿದೆ.










