ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಆಪರೇಷನ್ ಕಮಲ ವಿಚಾರಕ್ಕೆ ಸಂಬಂಧಿಸಿದಂತೆ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಶಾಸಕರೊಬ್ಬರ ಮಗನ ಬಳಿ ಯಡಿಯೂರಪ್ಪನವರೇ ಹಣದ ಆಮಿಷವೊಡ್ಡಿ ಆಪರೇಷನ್ ಕಮಲ ಮಾಡ ಹೊರಟಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ಇಂದು ಮಾನ್ಯ ಮುಖ್ಯಮಂತ್ರಿಗಳು ಇದರ ನೈಜ ಧ್ವನಿಮುದ್ರಿಕೆಗಳನ್ನು ಬಿಡುಗಡೆ ಮಾಡಿ ಬಿಜೆಪಿಯ ನಿಜ ಬಣ್ಣ ಬಯಲು ಮಾಡಿದ್ದಾರೆ.
ಜೆಡಿಎಸ್‌ನ ಶಾಸಕರಿಗೂ ಕಾಂಗ್ರೆಸ್‌ನ ಶಾಸಕರಿಗೂ ಬಿಜೆಪಿ ದುಡ್ಡಿನ ಹಾಗೂ ಅಧಿಕಾರದ ಆಮಿಷ ತೋರಿಸಿದೆ. ಕಪ್ಪು ಹಣಕ್ಕೆ ಕಡಿವಾಣ ಹಾಕುತ್ತೇವೆ ಎಂದಿದ್ದ ಪ್ರಧಾನಿ ಮೋದಿ ಅವರೇ, ನಿಮ್ಮ ನಾಯಕರೇ ರಾಜಾರೋಷವಾಗಿ ಕಪ್ಪು ಹಣದ ವ್ಯವಹಾರ ಮಾಡುತ್ತಿದ್ದಾರೆ. ಇವರ ವಿರುದ್ಧ ಏನು ಕ್ರಮ ಕೈಗೊಳ್ಳುತ್ತೀರಾ? ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.












