ಚೆನ್ನೈ : ಗಾನ ಗಂಧರ್ವ ಎಸ್.ಪಿ. ಬಾಲಸುಬ್ರಹ್ಮಣ್ಯಂ(74) ಇಂದು ವಿಧಿವಶರಾಗಿದ್ದಾರೆ. ಆಗಸ್ಟ್ 5ರಂದು ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 1:04ಕ್ಕೆ ಚೆನ್ನೈನ ಎಂ.ಜಿ.ಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಕೊರೊನಾ ಲಕ್ಷಣಗಳು ಕಂಡುಬಂದಿದ್ದರಿಂದ ಆಗಸ್ಟ್ 5ರಂದು ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ವೆಂಟಿಲೇಟರ್ ಮೂಲಕ ಎಸ್.ಪಿ.ಬಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಅವರನ್ನು ತಜ್ಞ ವೈದ್ಯರ ತಂಡ ಆರೈಕೆ ಮಾಡುತ್ತಿದ್ದರು. ಆಗಸ್ಟ್ 24ರಂದು ಅವರ ಕೊರೊನಾ ವರದಿ ನೆಗೆಟಿವ್ ಬಂದಿತ್ತು. ಅವರ ಆರೋಗ್ಯ ಸ್ಥಿತಿ ಬಗ್ಗೆ ಪುತ್ರ ಎಸ್.ಪಿ.ಬಿ ಚರಣ್ ಅವರು ಕ್ಷಣ ಕ್ಷಣಕ್ಕೂ ಮಾಹಿತಿ ನೀಡುತ್ತಿದ್ದರು. ಇಂದೂ ಕೂಡಾ ಎಸ್‍ಪಿಬಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸತತ 51 ದಿನಗಳ ಕಾಲ ಹೋರಾಟ ನಡೆಸಿದ ಎಸ್‍ಪಿಬಿ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
1946 ಜೂನ್ 4ರಂದು ಜನಿಸಿದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಕನ್ನಡ, ತಮಿಳು, ಮಲಯಾಳಂ, ತೆಲುಗು ಭಾಷೆ ಸೇರಿದಂತೆ ಒಟ್ಟು 16 ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡನ್ನು ಹಾಡಿದ್ದಾರೆ. ಎಸ್‍ಪಿಬಿ ಅವರಿಗೆ ಭಾರತ ಸರ್ಕಾರ 2011ರಲ್ಲಿ ಪದ್ಮಶ್ರೀ ಹಾಗೂ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿತ್ತು.










