ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡರೆ ಹಾಳಾಗುವುದಿಲ್ಲ ಬದಲಿಗೆ ಆರೋಗ್ಯವಂತರಾಗುತ್ತಾರೆ.- ಬಿ.ಜಿ.ಸೋಮಶೇಖರ್..

711
firstsuddi

ಚಿಕ್ಕಮಗಳೂರು – ಪೋಷಕರು ಮತ್ತು ಶಿಕ್ಷಕರು ಶಿಕ್ಷಣದ ಜೊತೆಗೆ ಮಕ್ಕಳ ಕ್ರೀಡಾ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಜಿ.ಸೋಮಶೇಖರ್ ಸಲಹೆ ಮಾಡಿದರು.ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಗರದ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿ ಗುರುವಾರ ನಡೆದ ತಾಲೂಕು ಕಸಬಾ ಮೂರು ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಇತ್ತೀಚಿನ ವರ್ಷಗಳಲ್ಲಿ ಮಕ್ಕಳನ್ನು ಬರೀ ಓದುವ ಯಂತ್ರಗಳನ್ನಾಗಿ ಮಾಡಲಾಗುತ್ತಿದೆ, ಮಕ್ಕಳು ಆಟವಾಡಲು ಹೋದರೆ ಹಾಳಾಗುತ್ತಾರೆ ಎಂಬ ಮನಸ್ಥಿತಿ ಪೋಷಕರಲ್ಲಿದೆ ಇದರಿಂದಾಗಿ ಸಾಕ್ಷರತೆಯಲ್ಲಿ ದೇಶ ಮುಂದಿದ್ದರೂ ಕ್ರೀಡಾ ಕ್ಷೇತ್ರದಲ್ಲಿ ಹಿಂದುಳಿಯುವಂತಾಗಿದೆ ಎಂದು ವಿಷಾದಿಸಿದರು.ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡರೆ ಹಾಳಾಗುವುದಿಲ್ಲ ಬದಲಿಗೆ ಅವರು ಆರೋಗ್ಯವಂತರಾಗುತ್ತಾರೆ ಎಂದ ಅವರು ಪೋಷಕರು ಮತ್ತು ಶಿಕ್ಷಕರು ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಉತ್ತಮ ಕ್ರೀಡಾ ಪಟುಗಳು ರೂಪುಗೊಂಡು ಕ್ರೀಡಾ ಕ್ಷೇತ್ರದಲ್ಲಿ ದೇಶ ಮುನ್ನಡೆ ಸಾಧಿಸಲು ಸಾಧ್ಯವಾಗುತ್ತದೆ ಎಂದರು.
ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಶಿಕ್ಷಣ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜೆಸಿಂತಾ ಅನಿಲ್‍ಕುಮಾರ್ ಮಕ್ಕಳಲ್ಲಿ ಆಡಬೇಕೆನ್ನುವ ಉತ್ಸಾಹವಿರುತ್ತದೆ ಅದಕ್ಕೆ ಪೋಷಕರು ಮತ್ತು ಶಿಕ್ಷಕರು ತಣ್ಣೀರೆರೆಚಬಾರದು ಅವರನ್ನು ಓದಿಗೆ ಮಾತ್ರ ಸೀಮಿತಗೊಳಿಸಬಾರದು ಎಂದು ಕಿವಿಮಾತು ಹೇಳಿದರು.ಪ್ರಾಸ್ತಾವಿಕವಾಗಿ ಮಾತನಾಡಿದ ತಾಲ್ಲೂಕು ಕ್ರೀಡಾಧಿಕಾರಿ ರವಿಕುಮಾರ್ ಈ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳು ಆ.31 ರಂದು ನಡೆಯಲಿರುವ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸ್ಪರ್ಧಿಸಲು ಅರ್ಹತೆ ಪಡೆಯುತ್ತಾರೆ ಎಂದು ತಿಳಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟರಾಮು ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿದರು, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪರಮೇಶ್ವರಪ್ಪ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.ಅತಿಥೇಯ ಬೀಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ದಿ ಸಮಿತಿ ಸದಸ್ಯ ಗಂಗಾಧರಪ್ಪ ಅಧ್ಯಕ್ಷತೆ ವಹಿಸಿದ್ದರು, ಮುಖ್ಯ ಶಿಕ್ಷಕಿ ವಿಮಲಾ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಜಯಣ್ಣ, ಸದಸ್ಯೆ ದಾಕ್ಷಾಯಣಿ ಪೂರ್ಣೇಶ್, ಬೀಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ, ಕ್ಷೇತ್ರ ಸಮನ್ವಯಾಧಿಕಾರಿ ಜಯರಾಂ, ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಬಿ.ಆರ್.ಗೀತಾ, ದೈಹಿಕ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಕಾಳಯ್ಯ ಉಪಸ್ಥಿತರಿದ್ದರು.ಮಹೇಶ್ವರಪ್ಪ ಕಾರ್ಯಕ್ರಮವನ್ನು ನಿರೂಪಿಸಿದರು, ಶಿಕ್ಷಕರಾದ ರಿಯಾಜ್ ಅಹಮದ್ ಸ್ವಾಗತಿಸಿದರು, ಎಸ್.ಈ.ಲೋಕೇಶ್ವರಾಚಾರ್ ವಂದಿಸಿದರು.ಕಸಬಾ 3 ಹೋಬಳಿಯ 24 ಶಾಲೆಗಳ 970 ವಿದ್ಯಾರ್ಥಿಗಳು ಕ್ರೀಡಾ ಕೂಟದಲ್ಲಿ ಪಾಲ್ಗೊಂಡು ಸಾರ್ವಜನಿಕರ ಗಮನ ಸೆಳೆದರು.