ನಾವು ಇಂದು ಪರಿಸರ ಮಾಲಿನ್ಯವನ್ನು ತಡೆಗಟ್ಟಿದರೆ ಮಾತ್ರ ಮುಂದಿನ ಪೀಳಿಗೆಗೆ ಶುದ್ದವಾದ ಗಾಳಿ ಮತ್ತು ನೀರು ದೊರೆಯುತ್ತದೆ: ಸಿ.ಸತ್ಯಭಾಮ…

596
firstsuddi

ಚಿಕ್ಕಮಗಳೂರು: ನೀರನ್ನು ರಕ್ಷಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 2019 ನೇ ಸಾಲನ್ನು ಜಲ ಸಂರಕ್ಷಣಾ ವರ್ಷವನ್ನಾಗಿ ಆಚರಿಸಲು ನಿರ್ಧರಿಸಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಸತ್ಯಭಾಮ ಹೇಳಿದರು.
ಜೆಸಿಐ ಚಿಕ್ಕಮಗಳೂರು ಮಲ್ನಾಡ್ ಸಂಸ್ಥೆ ನಗರದ ಸಂತ ಜೋಸೇಫರ ಪದವಿಪೂರ್ವ ಕಾಲೇಜಿನಲ್ಲಿ ಗುರುವಾರ ಏರ್ಪಡಿಸಿದ್ದ ಪರಿಸರ ಸಂರಕ್ಷಣೆ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈಗಾಗಲೇ ಜಲಧಾರೆ ಯೋಜನೆಯನ್ನು ಅನುಷ್ಠಾನಗೊಳಿಸಿದೆ, ಈ ಯೋಜನೆಯಡಿ ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಜಾಗಗಳಲ್ಲೂ ಗಿಡ ನೆಡುವುದು, ಚೆಕ್ ಡ್ಯಾಂಗಳನ್ನು ನಿರ್ಮಿಸುವ ಮೂಲಕ ಅಂತರ್ಜಲವನ್ನು ಹೆಚ್ಚಿಸುವ ಕೆಲಸ ಮಾಡಲಾಗುವುದು ಎಂದರು.
ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಕುರಿತು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಅದನ್ನು ನಾವು ಇಂದು ನಿಭಾಯಿಸಿ ಪರಿಸರ ಮಾಲಿನ್ಯವನ್ನು ತಡೆಗಟ್ಟಿದರೆ ಮಾತ್ರ ಮುಂದಿನ ಪೀಳಿಗೆಗೆ ಶುದ್ದವಾದ ಗಾಳಿ ಮತ್ತು ನೀರು ದೊರೆಯುತ್ತದೆ ಎಂದು ಕಿವಿಮಾತು ಹೇಳಿದರು.
ರೆಡ್‍ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷ ಡಾ|| ಕೆ.ಸುಂದರಗೌಡ ಮಾತನಾಡಿ ಮುಂದಿನ ಪೀಳಿಗೆಗೆ ಶುದ್ದವಾದ ಗಾಳಿ, ನೀರು ಬೇಕಾದರೆ ನಾವು ಈಗಲೇ ಸಾಕಷ್ಟು ಗಿಡಮರಗಳನ್ನು ಬೆಳೆಸಬೇಕು ಎಂದು ಸಲಹೆ ಮಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜೆಸಿಐ ಅಧ್ಯಕ್ಷ ಕೆ.ಎಂ.ಇಕ್ಬಾಲ್ ಪರಿಸರ ಮಾಲಿನ್ಯವನ್ನು ತಡೆಗಟ್ಟುವುದು ಮತ್ತು ಪರಿಸರವನ್ನು ಸಂರಕ್ಷಿಸುವುದು ಯುವಜನತೆಯಿಂದ ಮಾತ್ರ ಸಾಧ್ಯ ಹಾಗಾಗಿ ವಿದ್ಯಾರ್ಥಿಗಳಲ್ಲಿ ಪರಿಸರದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲೆ ಮಿನಿ ಥಾಮಸ್, ಸವಿತಾ ಸಮಾಜ ಮೀಸಲಾತಿ ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಜೆ.ಸತ್ಯನಾರಾಯಣ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಅನು ಪಿ.ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು, ಸೌಂದರ್ಯ ಸ್ವಾಗತಿಸಿದರು, ಸ್ಮಿತಿ ವಂದಿಸಿದರು.