ಸಿಎಂ ಹಾಗೂ ಕೆಲವು ಸಚಿವರು ಉತ್ತರ ಪ್ರದೇಶ ಮುಖ್ಯಮಂತ್ರಿಯಿಂದ ಪ್ರೇರಿತರಾಗಿರುವುದು ದುರದೃಷ್ಟಕರ : ಸಿದ್ದರಾಮಯ್ಯ.

94
firstsuddi

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮತ್ತು ಕೆಲವು ಸಚಿವರು ಉತ್ತರಪ್ರದೇಶದ ಮುಖ್ಯಮಂತ್ರಿಯವರಿಂದ ಪ್ರೇರಿತರಾಗಿರುವುದು ದುರದೃಷ್ಟಕರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಸಮಾಧಾನ ಹೊರಹಾಕಿದ್ದಾರೆ. ರಾಜ್ಯ ಸರ್ಕಾರ ಲವ್ ಜಿಹಾದ್ ತಡೆಗೆ ಕಾನೂನು ರೂಪಿಸಲು ಮುಂದಾಗಿದ್ದು, ಈ ಕುರಿತು ತಮ್ಮ ಟ್ವಿಟರ್ ಮೂಲಕ ಸರಣಿ ಟ್ವೀಟ್ ಮಾಡಿ ಅಸಮಾಧಾನ ಹೊರ ಹಾಕಿರುವ ಅವರು, ‘ಲವ್ ಜಿಹಾದ್’ ತಡೆಗೆ ಕಾನೂನು ರೂಪಿಸುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅವರ ಘೋಷಣೆ, ಆಡಳಿತದ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಹತಾಶ ಪ್ರಯತ್ನವಲ್ಲದೇ ಇನ್ನೇನಲ್ಲ. ಕೋಮುದ್ವೇಷವನ್ನು ಹುಟ್ಟುಹಾಕಿ ರಾಜಕೀಯದ ಬೇಳೆ ಬೇಯಿಸುವ ದುರುದ್ದೇಶವಲ್ಲದೇ ಬೇರೆ ಯಾವ ಸದುದ್ದೇಶ ಈ ಘೋಷಣೆಗೆ ಇಲ್ಲ.

ಲವ್ ಜಿಹಾದ್’ ಎಂದರೆ ಏನು ಎನ್ನುವುದೇ ಸ್ಪಷ್ಟ ಇಲ್ಲದೆ ಇರುವಾಗ, ‘ಯಾವ ಕಾನೂನು ಕೂಡಾ ಲವ್ ಜಿಹಾದ್ ಅನ್ನು ವ್ಯಾಖ್ಯಾನಿಸಿಲ್ಲ’ ಎಂದು ಕೇಂದ್ರ ಗೃಹಸಚಿವಾಲಯವೇ ಸ್ಪಷ್ಟಪಡಿಸಿರುವಾಗ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಯಾವ ಆಧಾರದಲ್ಲಿ ಕಾನೂನು ರೂಪಿಸಲು ಹೊರಟಿದ್ದಾರೆ?

ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ತಮ್ಮ ರಾಜಕೀಯ ಅನುಕೂಲತೆಗೆ ತಕ್ಕಂತೆ ತಪ್ಪಾಗಿ ವಿಶ್ಲೇಷಿಸುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ‘ಮತಾಂತರ ಎನ್ನುವುದು ಅಂತರಧರ್ಮೀಯ ಮದುವೆಗೆ ಅಸ್ತ್ರವಾಗಬಾರದು’ ಎಂದು ತೀರ್ಪು ಹೇಳಿದೆಯೇ ಹೊರತು ಅಂತರಧರ್ಮೀಯ ಮದುವೆಯೇ ಅಕ್ರಮ ಎಂದು ಹೇಳಿಲ್ಲ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮತ್ತು ಕೆಲವು ಸಚಿವರು ಉತ್ತರಪ್ರದೇಶದ ಮುಖ್ಯಮಂತ್ರಿಯವರಿಂದ ಪ್ರೇರಿತರಾಗಿರುವುದು ದುರದೃಷ್ಟಕರ. ಪ್ರಗತಿಪರ ಚಿಂತಕರ ಪರಂಪರೆಯ ಕರ್ನಾಟಕಕ್ಕೆ ‘ಗೂಂಡಾರಾಜ್ಯ’ ಎಂಬ ಕುಖ್ಯಾತಿಯ ಉತ್ತರಪ್ರದೇಶ ಮಾದರಿ ಅಲ್ಲ, ಅಲ್ಲಿನ ಮುಖ್ಯಮಂತ್ರಿ ಪ್ರೇರಣೆಯೂ ಆಗಬಾರದು ಎಂದು ಟ್ವೀಟ್ ಮಾಡಿದ್ದಾರೆ.