ಸಾಹಿತ್ಯದ ಪುಸ್ತಕಗಳನ್ನು ಓದುವ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು- ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ್…

393
firstsuddi

ಚಿಕ್ಕಮಗಳೂರು – ಸರ್ಕಾರ ಮತ್ತು ಸಂಘ ಸಂಸ್ಥೆಗಳಿಂದ ದೊರೆಯುವ ಸವಲತ್ತುಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟರಾಮು ಸಲಹೆ ಮಾಡಿದರು. ನಗರದ ಆಜಾದ್ ಪಾರ್ಕ್ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಜಿಲ್ಲಾ ಕಸಾಪ ವತಿಯಿಂದ ನೀಡಲಾದ ಸಾಹಿತ್ಯದ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಅವರು ಮಾತನಾಡಿದರು.ಬಹಳಷ್ಟು ವರ್ಷಗಳ ಹಿಂದೆ ಬಡವರು ಮತ್ತು ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ಶಿಕ್ಷಣ ಮರೀಚಿಕೆಯಾಗಿತ್ತು, ಮೈಲಿಗಟ್ಟಲೆ ನಡೆದು ಅವರಿವರ ಮನೆಯಲ್ಲಿ ವಾರಾನ್ನದೂಟ ಮಾಡಿ ವಿದ್ಯಾರ್ಜನೆ ಮಾಡಬೇಕಿತ್ತು, ಆದರೆ ಇತ್ತೀಚಿನ ವರ್ಷಗಳಲ್ಲಿ ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿವೆ, ಕೋಟ್ಯಾಂತರ ರೂ ವ್ಯಯಿಸಿ ಪಠ್ಯಪುಸ್ತಕ, ಸಮವಸ್ತ್ರ, ಬಿಸಿಯೂಟ, ಸೈಕಲ್ ಸೇರಿದಂತೆ ಅನೇಕ ಸವಲತ್ತುಗಳ ಜೊತೆಗೆ ಉಚಿತ ಶಿಕ್ಷಣವನ್ನೂ ನೀಡುತ್ತಿವೆ ಎಂದರು.ಸಂಘ ಸಂಸ್ಥೆಗಳೂ ಸಹ ವಿದ್ಯಾರ್ಜನೆಗಾಗಿ ಅನೇಕ ಸವಲತ್ತುಗಳನ್ನು ನೀಡುತ್ತಿವೆ ಎಂದ ಅವರು ವಿದ್ಯಾರ್ಥಿಗಳು ಇದನ್ನು ಸಮರ್ಪಕವಾಗಿ ಬಳಸಿಕೊಂಡು ಶ್ರದ್ದೆಯಿಂದ ವಿದ್ಯಾರ್ಜನೆ ಮಾಡಬೇಕು, ಶಿಕ್ಷಣವಂತರಾಗಿ ಹೊರಹೊಮ್ಮಬೇಕು ಎಂದು ಕಿವಿಮಾತು ಹೇಳಿದರು.ಜಯಕರ್ನಾಟಕ ಜಿಲ್ಲಾಧ್ಯಕ್ಷ ಕೆ.ಆರ್.ಅನಿಲ್ ಕುಮಾರ್ ಮಾತನಾಡಿ ಬಡತನದ ವಿರುದ್ದ ಹೋರಾಡಲು ಶಿಕ್ಷಣ ಪ್ರಮುಖವಾದ ಅಸ್ತ್ರ, ಶ್ರಮದಿಂದ ವಿದ್ಯಾರ್ಜನೆ ಮಾಡಿ ಶಿಕ್ಷಣವಂತರಾದರೆ ಮಾತ್ರ ಸಮಾಜದಲ್ಲಿ ಗೌರವ ಮತ್ತು ಅಂತಸ್ತು ದೊರೆಯುತ್ತದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ್ ಮಕ್ಕಳು ಪುಸ್ತಕ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು, ಸಾಹಿತ್ಯದ ಪುಸ್ತಕಗಳನ್ನು ಓದುವ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.ಜಿಲ್ಲಾ ಕಸಾಪ ಸದಸ್ಯ ರವಿ, ತಾಲ್ಲೂಕು ಕಸಾಪ ಅಧ್ಯಕ್ಷ ಹಿರೇಮಗಳೂರು ಪುಟ್ಟಸ್ವಾಮಿ, ಶಾಲೆಯ ಮುಖ್ಯಶಿಕ್ಷಕಿ ಗೀತಾ, ದೈಹಿಕ ಶಿಕ್ಷಕ ಎಸ್.ಈ.ಲೋಕೇಶ್ವರಾಚಾರ್ ಉಪಸ್ಥಿತರಿದ್ದರು.ಶಿಕ್ಷಕರಾದ ನಾಗವೇಣಿ ಕಾರ್ಯಕ್ರಮವನ್ನು ನಿರೂಪಿಸಿದರು, ಸಾವಿತ್ರಿ ಸ್ವಾಗತಿಸಿದರು, ಜಯಂತಿ ವಂದಿಸಿದರು.