ಕೋಲಾರ: ಚಿಂಚೋಳಿ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಅವರು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಅಡ್ಡಗಲ್ ನಲ್ಲಿರುವ ಸ್ಪೀಕರ್ ರಮೇಶ್ ಕುಮಾರ್ ಅವರ ನಿವಾಸಕ್ಕೆ ಉಮೇಶ್ ಜಾಧವ್ ಅವರು ತೆರಳಿ ತಮ್ಮ ರಾಜಿನಾಮೆ ಪತ್ರ ನೀಡಿದ್ದಾರೆ. ಉಮೇಶ್ ಜಾಧವ್ ಅವರು ಮಾ.6ರಂದು ಕಲಬುರಗಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಬಿಜೆಪಿಗೆ ಸೇರಲಿದ್ದಾರೆ ಎನ್ನಲಾಗಿದ್ದು, ಕಲಬುರಗಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ನ ಲೋಕಸಭಾ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಉಮೇಶ್ ಜಾಧವ್ ಅವರನ್ನು ಬಿಜೆಪಿ ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.










