ಚಿಕ್ಕಮಗಳೂರು : ಯಾವುದೇ ಸಾಧನೆಗೆ ಬಡತನ ಅಡ್ಡಿಯಾಗುವುದಿಲ್ಲ, ಮಕ್ಕಳಲ್ಲಿ ಸಾಧಿಸಬೇಕು ಎಂಬ ಛಲವಿದ್ದರೆ ದಾರಿ ತಾನಾಗಿಯೇ ತೆರೆದುಕೊಳ್ಳುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾದ ಅಧ್ಯಕ್ಷರಾದ ಪ್ರಭಾವತಿ ಎಂ. ಹಿರೇಮಠ್ ಹೇಳಿದರು.
ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ಬಾಲ ಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಚಿಕ್ಕಮಗಳೂರು ಇವರ ಸಂಯುಕ್ತಾಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ತಮ್ಮ ಜೀವನದಲ್ಲಿ ಉತ್ತಮ ಗುರಿಹೊಂದಿ ಅದನ್ನು ಸಾಧಿಸುತ್ತೇನೆ ಎಂಬ ಮನೋಭಾವ ಹೊಂದಿ ಆ ನಿಟ್ಟಿನಲ್ಲಿ ಪ್ರಯತ್ನ ಸಾಗಬೇಕಾಗಿದೆ, ಸಾಧಿಸುವ ಛಲವಿರುವವರಿಗೆ ಬಡತನ ಅಡ್ಡಿಯಾಗುವುದಿಲ್ಲ ಎಂದ ಅವರು ವಿದ್ಯಾರ್ಥಿಗಳು ತಮ್ಮಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರಹಾಕಬೇಕು. ತಮಗೆ ಆಸಕ್ತಿಯಿರುವ ಕ್ಷೇತ್ರದ ಕಡೆಗೆ ಗಮನ ಹರಿಸಿದಾಗ ಯಶಸ್ಸಿನ ದಾರಿ ತಾನಾಗಿಯೇ ತೆರೆದುಕೊಳ್ಳುತ್ತದೆ ಎಂದರು.
ವಿದ್ಯಾರ್ಥಿಗಳು ದೊಡ್ಡ ಕನಸುಗಳನ್ನು ಕಾಣುವುದರೊಂದಿಗೆ ಅದನ್ನು ನನಸಾಗಿಸಲು ಪ್ರಯತ್ನಿಸಬೇಕು. ಇದಕ್ಕೆ ಪೋಷಕರ ಬೆಂಬಲವೂ ಅಗತ್ಯವಾಗಿರುತ್ತದೆ. ವಿದ್ಯಾರ್ಥಿಗಳೂ ಕೂಡ ತಂದೆ, ತಾಯಿಯವರನ್ನು ಕಡೆಗಾಣಿಸದೆ ಗೌರವ ಭಾವನೆಯಿಂದ ಕಾಣಬೇಕು ಎಂದರು. ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಡಿ.ಟಿ. ದೇವೇಂದ್ರನ್ ಮಾತನಾಡಿ ಮಕ್ಕಳನ್ನು ಕಂಡಾಗ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಮಾತುಗಳು ನೆನಪಾಗುತ್ತದೆ. ಮಕ್ಕಳು ದೊಡ್ಡ ಕನಸುಗಳನ್ನು ಕಾಣಬೇಕು, ಆ ಕನಸನ್ನು ನನಸು ಮಾಡುವ ಮೂಲಕ ದೇಶದ ಸತ್ಪ್ರಜೆಗಳಾಗಿ ಬದುಕಬೇಕು ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ್ ಚೇಂಗಟಿ ಮಾತನಾಡಿ ಮಕ್ಕಳ ಹಿತ ರಕ್ಷಣೆಗಾಗಿ ನಮ್ಮ ಸಂವಿಧಾನದಿಂದ ಹಲವಾರು ಹಕ್ಕುಗಳನ್ನು ನೀಡಲ್ಪಟ್ಟಿದೆ. ಉತ್ತಮ ನೈತಿಕ ಮೌಲ್ಯದೊಂದಿಗೆ ವಿದ್ಯಾಭ್ಯಾಸ ಹೊಂದಿದಾಗ ಮಾತ್ರ ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಬಸವರಾಜು ಜಿ. ಅಧ್ಯಕ್ಷತೆ ವಹಿಸಿ ಮಾತನಾಡಿ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸುತ್ತವೆ. ಯಾವುದೇ ವಿದ್ಯಾರ್ಥಿಗಳು ಸೋತೆವೆಂದು ಮಾನಸಿಕವಾಗಿ ಕುಗ್ಗಬಾರದು, ಸೋಲೇ ಗೆಲುವಿನ ಮೆಟ್ಟಿಲುಗಳೆಂಬುದನ್ನು ಅರಿಯುವ ಮೂಲಕ ಸಕಾರಾತ್ಮಕ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಸಿ. ಬಸವರಾಜಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟರಾಮು, ವಕೀಲರ ಸಂಘದ ಉಪಾಧ್ಯಕ್ಷ ಎಸ್.ಎಸ್. ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.