ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿದ್ದು, ತೀರ್ಪನ್ನು ಡಿ.7ಕ್ಕೆ ಕಾಯ್ದಿರಿಸಿದೆ. ನಟಿ ಸಂಜನಾ ಗಲ್ರಾನಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ನೇತೃತ್ವದ ಪೀಠದಲ್ಲಿ ನಡೆಸಲಾಯಿತು. ನಟಿ ಸಂಜನಾ ಗಲ್ರಾನಿ ಅವರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲೆ ಹಸ್ಮತ್ ಪಾಷಾ ಅವರು, ಸಂಜನಾ ಅವರಿಗೆ ಆರೋಗ್ಯದ ಸಮಸ್ಯೆಯಿದ್ದು, 2019ರಿಂದ ಅಸ್ತಮಾ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರಿಗೆ ಚಳಿಗಾಲದಲ್ಲಿ ಈ ಸಮಸ್ಯೆ ಹೆಚ್ಚಾಗುವ ಕಾರಣದಿಂದ ಸಂಜನಾ ಅವರಿಗೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.
ಸರ್ಕಾರದ ಪರವಾಗಿ ವಾದ ಮಂಡಿಸಿದ ವಕೀಲ ಎಸ್‍ಪಿಪಿ ಪೀರಣ್ಣ ತಿಗಡಿ ಅವರು, ಈಗಾಗಲೇ ಪ್ರಕರಣದ ಆರೋಪಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ. ಅನಾರೋಗ್ಯವಿದ್ದರೆ ಅದಕ್ಕೆ ಸೂಕ್ತವಾದ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಮಾಡಬಹುದು. ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದರು. ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಪೂರ್ಣಗೊಳಿಸಿ ಪ್ರಕರಣದ ತೀರ್ಪನ್ನು ಡಿ.7ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.










