ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸದಾಶಿವ ಬ್ರಹ್ಮಾವರ್ (90)ಅವರು ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಬ್ರಹ್ಮಾವರ್ ಅವರು ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಸಾವಿನ ಸುದ್ದಿ ಕುಟುಂಬದವರನ್ನು ಹೊರತುಪಡಿಸಿ ಯಾರಿಗೂ ತಿಳಿಯಬಾರದು ಎಂದು ಮಕ್ಕಳಿಗೆ ಸೂಚಿಸಿದ್ದರು ಎನ್ನಲಾಗಿದೆ. ಬನಶಂಕರಿಯ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆಯನ್ನು ಮಾಡಲಾಗಿದೆ. ಕಳೆದ ವರ್ಷ ಮರೆವಿನ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕುಮಟಾದಲ್ಲಿ ತಿರುಗಾಡುತ್ತಿದ್ದರು. ಮಾಧ್ಯಮಗಳಲ್ಲಿ ಸುದ್ದಿಯಾದ ಬಳಿಕ ನಟರಾದ ಶಿವರಾಜ್ ಕುಮಾರ್, ಸುದೀಪ್ ಮೊದಲಾದವರು ನೆರವಾಗಿದ್ದರು.ಆ ಬಳಿಕ ಕುಟುಂಬದವರೊಂದಿಗೆ ವಾಸವಾಗಿದ್ದರು. ಸುಮಾರು 150 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.










