ಚಿಕ್ಕಮಗಳೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಹೇಳಿದರು. ಯುವಕಾಂಗ್ರೇಸ್ ವಿಧಾನಸಭಾ ಕ್ಷೇತ್ರ ಸಮಿತಿ ನಗರದ ಸಂತೆ ಮೈದಾನ ಮತ್ತು ತಮಿಳು ಕಾಲೋನಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮನೆಮನೆಗೆ ಕಾಂಗ್ರೇಸ್ ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕಳೆದ ನಾಲ್ಕೂವರೆ ವರ್ಷಗಳಲ್ಲಿ ನಾಡಿನ ಸರ್ವಾಂಗೀಣ ಅಭಿವೃದ್ದಿಗೆ ಅವಿರತವಾಗಿ ದುಡಿದಿದೆ, ಮುಖ್ಯಮಂತ್ರಿಗಳು ವಿವಿಧ ಕ್ರಾಂತಿಕಾರಿ ಕಾರ್ಯಕ್ರಮ ಮತ್ತು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಎಲ್ಲಾ ವರ್ಗದವರಿಗೆ ನೆರವಿನ ಹಸ್ತ ಚಾಚಿದ್ದಾರೆ ಎಂದರು. ಅನ್ನಭಾಗ್ಯ, ಕ್ಷೀರಭಾಗ್ಯ, ಶಾದಿಭಾಗ್ಯ ಸೇರಿದಂತೆ ಅನೇಕ ಕಾರ್ಯಕ್ರಮಗಳು ಜನಮನವನ್ನು ಗೆದ್ದಿದ್ದು ರಾಜ್ಯ ಸರ್ಕಾರದ ಸಾಧನೆಗಳೇ ಮುಂದಿನ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷಕ್ಕೆ ಶ್ರೀರಕ್ಷೆಯಾಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ಸಾಧನೆಗಳನ್ನು ಜನಪರ ಕಾರ್ಯಕ್ರಮಗಳ ಮಾಹಿತಿಯನ್ನು ಮನೆಮನೆಗೆ ಕಾಂಗ್ರೇಸ್ ಅಭಿಯಾನದ ಮೂಲಕ ಜನರಿಗೆ ತಲುಪಿಸಲಾಗುತ್ತಿದ್ದು, ಅಭಿಯಾನಕ್ಕೆ ಎಲ್ಲೆಡೆ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದರು. ಅಭಿಯಾನದ ಅಂಗವಾಗಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ರಾಹಿಲ್ ಶರೀಪ್ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಮನೆಮನೆಗೆ ತೆರಳಿ ರಾಜ್ಯ ಸರ್ಕಾರದ ಸಾಧನೆಗಳನ್ನು ವಿವರಿಸಿದರು.
ನಗರಸಭೆ ಸದಸ್ಯ ಹಿರೇಮಗಳೂರು ಪುಟ್ಟಸ್ವಾಮಿ, ಆನಂದ್, ಜಿಲ್ಲಾ ಯುವಕಾಂಗ್ರೇಸ್ ಉಪಾಧ್ಯಕ್ಷ ವಿನಾಯಕ, ಪ್ರಧಾನ ಕಾರ್ಯದರ್ಶಿ ಸಿ.ಸಿ.ಮಧು, ಮುಖಂಡರಾದ ಸಿ.ಎನ್.ಅಕ್ಮಲ್, ಶಾದಾಬ್ ಆಲಂಖಾನ್, ನಯಾಜ್, ಅಕ್ರಂ, ಅಪ್ಸರ್, ಫಯಾಜ್, ಅಭಿಯಾನದಲ್ಲಿ ಪಾಲ್ಗೊಂಡಿದ್ದರು.