ಚಿಕ್ಕಮಗಳೂರು -ಭಾರತ ಸೇವಾದಳದ ಶಿಕ್ಷಕರು ಸೇವೆಗಾಗಿ ಬಾಳು ಎಂಬ ಸೇವಾದಳದ ಮೂಲಧ್ಯೇಯವನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪ್ರಸನ್ನಕುಮಾರ್ ಸಲಹೆ ಮಾಡಿದರು.ಭಾರತ ಸೇವಾದಳದ ಜಿಲ್ಲಾ ಘಟಕ ನಗರದ ಆಜಾದ್ ಪಾರ್ಕ್ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸೇವಾದಳದ ಶಿಕ್ಷಕರ ತಾಲ್ಲೂಕು ಮಟ್ಟದ ಮಿಲಾಪ್ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸೇವಾದಳದ ಶಿಕ್ಷಕರು ಸೇವಾ ಮನೋಭಾವನೆಯನ್ನು ರೂಡಿಸಿಕೊಳ್ಳಬೇಕು, ವಿದ್ಯಾರ್ಥಿಗಳು ಮತ್ತು ಯುವಜನತೆಯಲ್ಲಿ ದೇಶಭಕ್ತಿ ಮತ್ತು ರಾಷ್ಟ್ರಪ್ರೇಮವನ್ನು ಬೆಳೆಸುವ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.ಭಾರತ ಸೇವಾದಳ ದೇಶಭಕ್ತರನ್ನು ಹುಟ್ಟುಹಾಕುವ ಸಲುವಾಗಿ ಆರಂಭಗೊಂಡ ದೇಶದ ಅತ್ಯಂತ ಪ್ರತಿಷ್ಠಿತ ಸಂಸ್ಥೆ, ಅದನ್ನು ಯಾವುದೇ ಕಾರಣಕ್ಕೂ ಸೊರಗಲು ಬಿಡಬಾರದು ಎಂದ ಅವರು ಆ ಸಂಸ್ಥೆಯನ್ನು ಉಳಿಸಿ ಬೆಳೆಸಿ ಇಡೀ ಪ್ರಪಂಚಕ್ಕೆ ಪರಿಚಯಿಸುವ ಜವಾಬ್ದಾರಿ ಸೇವಾದಳದ ಶಿಕ್ಷಕರ ಮೇಲಿದೆ ಎಂದರು.ಸೇವಾದಳವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಶಾಲೆಗಳಲ್ಲೂ ಸೇವಾದಳದ ಘಟಕಗಳನ್ನು ತೆರೆಯಬೇಕು, ಎಲ್ಲಾ ಶಿಕ್ಷಕರೂ ಸೇವಾದಳದ ಸದಸ್ಯರಾಗಬೇಕು, ವಿದ್ಯಾರ್ಥಿಗಳು ಮತ್ತು ಯುವಜನತೆಯಲ್ಲಿ ಸೇವಾ ಮನೋಭಾವನೆಯನ್ನು ಬೆಳೆಸಬೇಕು ಎಂದು ತಿಳಿಸಿದರು.
ಮಾಜಿ ಶಾಸಕ ಐ.ಬಿ.ಶಂಕರ್ ಮಾತನಾಡಿ ಭಾರತ ಸೇವಾದಳಕ್ಕೆ ಶಿಕ್ಷಕರೇ ಭದ್ರ ಬುನಾದಿ, ಅವರು ಮನಸ್ಸು ಮಾಡಿದರೆ ಸೇವಾದಳವನ್ನು ಉಳಿಸಿ ಬೆಳೆಸ ಬಹುದು ಎಂದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಭಾರತ ಸೇವಾದಳದ ಜಿಲ್ಲಾಧ್ಯಕ್ಷ ಬಿ.ಹೆಚ್.ನರೇಂದ್ರ ಪೈ ಇಂದು ಎಲ್ಲಾ ಶಾಲೆಗಳಲ್ಲೂ ಮಕ್ಕಳನ್ನು ಬರೀ ಓದುವ ಯಂತ್ರಗಳನ್ನಾಗಿ ರೂಪಿಸಲಾಗುತ್ತಿದೆ, ಅವರಲ್ಲಿ ಸಂಸ್ಕøತಿ ಮತ್ತು ಸಂಸ್ಕಾರವನ್ನು ಬೆಳೆಸುವ ಕೆಲಸವಾಗುತ್ತಿಲ್ಲ ಎಂದು ವಿಷಾದಿಸಿ ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿ ಮತ್ತು ದೇಶಪ್ರೇಮವನ್ನು ಬೆಳೆಸುವ ಮಹತ್ತರ ಹೊಣೆಗಾರಿಕೆ ಸೇವಾದಳದ ಶಿಕ್ಷಕರ ಮೇಲಿದೆ ಎಂದು ಹೇಳಿದರು.ಸೇವೆಯಿಂದ ನಿವೃತ್ತರಾದ ಹಿನ್ನೆಲೆಯಲ್ಲಿ ಸರ್ಕಾರಿ ಜ್ಯೂನಿಯರ್ ಕಾಲೇಜ್ ಪ್ರೌಢಶಾಲಾ ವಿಭಾಗದ ನಿವೃತ್ತ ದೈಹಿಕ ಶಿಕ್ಷಕ ಷಡಕ್ಷರಿ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಸೇವಾದಳದ ಜಿಲ್ಲಾ ಸಂಘಟಕ ಚಂದ್ರಕಾಂತ್, ಮುಖ್ಯಶಿಕ್ಷಕಿ ಬಿ.ಆರ್.ಗೀತಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹಕಾರ್ಯದರ್ಶಿ ಮಹೇಶ್ವರಪ್ಪ, ತಾಲ್ಲೂಕು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕಾಳಯ್ಯ, ತಾಲ್ಲೂಕು ಕ್ರೀಡಾಧಿಕಾರಿ ರವಿಕುಮಾರ್, ಶಿಕ್ಷಕರಾದ ನಾಗಮಣಿ, ವಸಂತಕುಮಾರಿ ಉಪಸ್ಥಿತರಿದ್ದರು.ಸೇವಾದಳದ ತಾಲ್ಲೂಕು ಸಂಘಟಕ ಎಸ್.ಈ.ಲೋಕೇಶ್ವರಾಚಾರ್ ಕಾರ್ಯಕ್ರಮವನ್ನು ನಿರೂಪಿಸಿದರು, ಜಿಲ್ಲಾ ಕಾರ್ಯದರ್ಶಿ ಹಂಪಯ್ಯ ಸ್ವಾಗತಿಸಿದರು, ಶಿಕ್ಷಕ ಶಂಕರೇಗೌಡ ವಂದಿಸಿದರು.
Home ಸ್ಥಳಿಯ ಸುದ್ದಿ ವಿದ್ಯಾರ್ಥಿಗಳು ಮತ್ತು ಯುವಜನತೆಯಲ್ಲಿ ದೇಶಭಕ್ತಿ ಮತ್ತು ರಾಷ್ಟ್ರಪ್ರೇಮವನ್ನು ಬೆಳೆಸುವ ಕೆಲಸ ಮಾಡಬೇಕು-ಪ್ರಸನ್ನಕುಮಾರ್