ಉಗ್ರರ ಗುಂಡಿನ ದಾಳಿಗೆ ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮ-ಮೂವರಿಗೆ ಗಾಯ…

121
firstsuddi

ಶ್ರೀನಗರ : ಗಸ್ತು ತಿರುಗುತ್ತಿದ್ದ ಭಾರತೀಯ ಯೋಧರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಸಿಆರ್‌ಪಿಎಫ್  ಯೋಧರು ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ. ಯೋಧರು ಜಮ್ಮು ಕಾಶ್ಮೀರಾದ ನೌಗಾಮ್ ಪ್ರದೇಶದ ಕಂಡಿಜಾಲ್ ಸೇತುವೆ ಬಳಿ ಗಸ್ತು ತಿರುಗುತ್ತಿದ್ದ ವೇಳೆ ಉಗ್ರರು ಮನಬಂದಂತೆ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಉಗ್ರರು ದಾಳಿ ನಡೆಸುತ್ತಿದ್ದಂತೆ ಕಾರ್ಯ ಪ್ರವೃತ್ತರಾದ ಯೋಧರೂ ಕೂಡಾ ಉಗ್ರರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಉಗ್ರರ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಸ್ಥಳಿಯ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಘಟನಾ ಸ್ಥಳದಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಪ್ರದೇಶವನ್ನು ಸುತ್ತುವರೆದು ಉಗ್ರರಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ಸಿಆರ್‌ಪಿಎಫ್ ಮೂಲಗಳಿಂದ ತಿಳಿದು ಬಂದಿದೆ.