ಬೆಂಗಳೂರು:ರಾಜ್ಯದ ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು,ಮೈಸೂರು, ತುಮಕೂರು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆಗಳು ಮತ್ತು ಇತರ 102 ನಗರ ಸ್ಥಳೀಯ ಸಂಸ್ಥೆಗಳಿಗೆ ಇಂದು ಮತದಾನ ನಡೆಯಲಿದೆ. ಈ ಕ್ಷೇತ್ರಗಳಲ್ಲಿ ವಿವಿಧ ರಾಜಕೀಯ ಪಕ್ಷಗಳು ಮತ್ತು ಪಕ್ಷೇತರರು ಸೇರಿ ಒಟ್ಟು 9121 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಇವಿಎಂಗಳನ್ನು ಬಳಸಲಾಗುತ್ತಿದೆ.ಮತದಾನ ಬೆಳಿಗ್ಗೆ 7 ಗಂಟೆಗೆ ಆರಂಭವಾಗಿ ಸಂಜೆ 5 ರವರೆಗೆ ನಡೆಯಲಿದೆ. ವಿವಿಧ ನಗರ ಸಭೆಗಳ 12 ವಾರ್ಡ್ ಗಳು ಮತ್ತು ಪುರಸಭೆಗಳ 17 ವಾರ್ಡ್ ಗಳಿಗೆ ಒಟ್ಟು 29 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಕೃತಿ ವಿಕೋಪಕ್ಕೆ ತುತ್ತಾದ ಮಡಿಕೇರಿ 3 ಪಟ್ಟಣ ಪಂಚಾಯಿತಿಗಳಲ್ಲಿ ಈ ಚುನಾವಣೆಯನ್ನು ತಡೆಹಿಡಿಯಲಾಗಿದೆ. ಚುನಾವಣೆ ನಡೆಯುವ ಪ್ರದೇಶಗಳಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಆಯಾ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.