ವಿಷಾನಿಲ ಸೋರಿಕೆಯಾಗಿ 9ಮಂದಿ ಸಾವು-20ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರ…

140
firstsuddi

ವಿಶಾಖಪಟ್ಟಣ : ರಾಸಾಯನಿಕ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿ 9ಮಂದಿ ಮೃತಪಟ್ಟಿರುವ ಘಟನೆ ವಿಶಾಖಪಟ್ಟಣಂನ ಆರ್.ಆರ್. ವೆಂಕಟಪುರಂ ನಲ್ಲಿ ಇರುವ ಎಲ್. ಜಿ. ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ನಡೆದಿದೆ. ಇಂದು ಮುಂಜಾನೆ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿ ಗಾಳಿಯಲ್ಲಿ ಸುತ್ತಮುತ್ತಲಿನ ಪ್ರದೇಶಗಳಿಗೆ ಹರಡಿದ್ದು, ಪರಿಣಾಮ ಬೆಳಿಗ್ಗೆ ವಾಕಿಂಗ್ ಹಾಗೂ ತಮ್ಮ ದಿನನಿತ್ಯದ ಕೆಲಸಗಳಿಗೆ ಬಂದವರು ವಿಷಾನಿಲ ಗಾಳಿಯನ್ನು ಉಸಿರಾಡಿದ ಕಾರಣ 80 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, 20 ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದೆ. ಹಾಗೂ 7 ವರ್ಷದ ಬಾಲಕಿ ಸೇರಿದಂತೆ 9 ಮಂದಿ ಮೃತಪಟ್ಟಿದ್ದಾರೆ. ಅಸ್ವಸ್ಥರನ್ನು ವಿಶಾಖಪಟ್ಟಣದ ಕಿಂಗ್ ಜಾರ್ಜ್ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅನಿಲ ಸೋರಿಕೆಯಾದ ಪರಿಣಾಮ ಕಾರ್ಖಾನೆಯ ಸುಮಾರು 5 ಕಿ.ಮೀ ವ್ಯಾಪ್ತಿಯಲ್ಲಿ ಆತಂಕ ಸೃಷ್ಠಿಯಾಗಿದೆ.
ಈ ವಿಷಯ ತಿಳಿಯುತ್ತಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಂಧ್ರ ಮುಖ್ಯಮಂತ್ರಿಗಳಿಗೆ ಕರೆ ಮಾಡಿ ಮಾಹಿತಿಯನ್ನು ಪಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.