ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಇಂದು ಇಒಡಬ್ಲ್ಯು ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯು)ವು ಫರ್ನಾಂಡೀಸ್ ಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 14 ರಂದು ವಿಚಾರಣೆಗೆ ಹಾಜರಾಗುವಂತೆ ಮತ್ತೆ ಸಮನ್ಸ್ ಜಾರಿ ಮಾಡಿತ್ತು. ಇದೀಗ ನಟಿ ಜಾಕ್ವೆಲಿನ್ ಇಒಡಬ್ಲ್ಯು ಕಚೇರಿ ತಲುಪಿ ವಿಚಾರಣೆ ಎದುರಿಸುತ್ತಿದ್ದಾರೆ. ಬೆಳಗ್ಗೆ 11:30 ರಿಂದ ವಿಚಾರಣೆ ಆರಂಭವಾಗಿದ್ದು, ರಾತ್ರಿ 8:30 ವರೆಗೆ ವಿಚಾರಣೆ ನಡೆಯುವ ಸಾಧ್ಯತೆಗಳಿದೆ. ಒಟ್ಟು ಮೂರು ಹಂತಗಳಲ್ಲಿ ವಿಚಾರಣೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.
ಪ್ರಕರಣದ ಪ್ರಮುಖ ಆರೋಪಿ ಸುಕೇಶ್ ಚಂದ್ರಶೇಖರ್ ನಿಂದ ಬೆಲೆ ಬಾಳುವ ಗಿಫ್ಟ್ ಪಡೆದಿರುವ ಹಿನ್ನೆಲೆಯಲ್ಲಿ ನಟಿಯನ್ನು ವಿಚಾರಣೆ ನಡೆಸಲಾಗುತ್ತಿದೆ. ಆಗಸ್ಟ್ 17 ರಂದು ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆರೋಪಿ ಎಂದು ಹೆಸರಿಸಿ ಇಡಿ ಚಾರ್ಜ್ ಶೀಟ್ ಸಲ್ಲಿಸಿತ್ತು.










